ಸಂಪುಟ ಸರ್ಕಸ್: ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೂ ಮುನ್ನವೇ ಆಕಾಂಕ್ಷಿಗಳಿಂದ ತೀವ್ರ ಲಾಬಿ

ಹೈಲೈಟ್ಸ್‌:

  • ರಾಜ್ಯದಲ್ಲಿ ಸಂಪುಟ ಸರ್ಕಸ್ ಗರಿಗೆದರಿದೆ
  • ಸೋಮವಾರ ಬಸವರಾಜ ಬೊಮ್ಮಾಯಿ ದೆಹಲಿಗೆ
  • ಪ್ರವಾಸಕ್ಕೂ ಮುನ್ನವೇ ಆಕಾಂಕ್ಷಿಗಳಿಂದ ತೀವ್ರ ಲಾಬಿ

ಬೆಂಗಳೂರು: ಸಿಎಂ ಬಸವರಾಜ ಬೊಮ್ಮಾಯಿ ದೆಹಲಿ ಪ್ರವಾಸಕ್ಕೂ ಮುನ್ನವೇ ಸಚಿವ ಸ್ಥಾನದ ಆಕಾಂಕ್ಷಿಗಳ ಲಾಬಿ ತೀವ್ರಗೊಂಡಿದೆ. ಆಕಾಂಕ್ಷಿಗಳ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ದೆಹಲಿ ಮಟ್ಟದಲ್ಲೂ ಪ್ರಯತ್ನ ನಡೆಸುತ್ತಿದ್ದಾರೆ.

ರಾಜ್ಯದಲ್ಲಿ ಸಂಪುಟ ವಿಸ್ತರಣೆಯೋ ಅಥವಾ ಸಂಪುಟ ಪುನಾರಚನೆಯೋ ಎಂಬ ಪ್ರಶ್ನೆಗೆ ಸ್ವತಃ ಸಿಎಂ ಬೊಮ್ಮಾಯಿ ಉತ್ತರ ನೀಡಿಲ್ಲ. ಈ ಬಗ್ಗೆ ಪ್ರಶ್ನೆ ಕೇಳಿದರೂ ಬಹಿರಂಗವಾಗಿ ಮಾತನಾಡುವುದಿಲ್ಲ ಎಂದು ಹೇಳುತ್ತಾರೆ. ಈ ಗೊಂದಲದ ಹಿನ್ನೆಲೆಯಲ್ಲಿ ಸಂಪುಟದಲ್ಲಿ ಇರುವ ಹಿರಿಯರು ತಮ್ಮ ಸ್ಥಾನ ಉಳಿಸಿಕೊಳ್ಳಲು ಪ್ರಯತ್ನ ಪಡುತ್ತಿದ್ದರೆ ಆಕಾಂಕ್ಷಿಗಳು ಮಂತ್ರಿ ಸ್ಥಾನಕ್ಕಾಗಿ ಪ್ರಯತ್ನ ನಡೆಸುತ್ತಿದ್ದಾರೆ.

ಯಾರೆಲ್ಲಾ ಆಕಾಂಕ್ಷಿಗಳು?

ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರ್ಪಡೆಗೊಳ್ಳಲು ಆಕಾಂಕ್ಷಿಗಳ ಸಂಖ್ಯೆ ಸಾಕಷ್ಟಿದೆ. ಎಂಪಿ ರೇಣುಕಾಚಾರ್ಯ, ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಬಿವೈ ವಿಜಯೇಂದ್ರ, ರಾಜೂಗೌಡ, ಪೂರ್ಣಿಮಾ ಶ್ರೀನಿವಾಸ್, ಸಿಪಿ ಯೋಗೀಶ್ವರ್‌ ಪ್ರಯತ್ನ ನಡೆಸುತ್ತಿದ್ದಾರೆ. ಇದರ ಜೊತೆಗೆ ಶ್ರೀಮಂತ ಪಾಟೀಲ್, ಎಂಪಿ ಕುಮಾರಸ್ವಾಮಿ, ಆನಂದ ಮಾಮನಿ ಕೂಡಾ ಆಕಾಂಕ್ಷಿಗಳ ಪಟ್ಟಿಯಲ್ಲಿದ್ದಾರೆ. ಆದರೆ ಸಂಪುಟದಲ್ಲಿ ಖಾಲಿ ಇರುವ ಸ್ಥಾನಗಳ ಕೇವಲ 4 ಮಾತ್ರ.

ಇನ್ನು ಸಂಪುಟ ಪುನಾರಚನೆ ಆದರಲ್ಲಿ ಕೆಲವು ಹಿರಿಯರನ್ನು ಕೈಬಿಡಬೇಕಾಗುತ್ತದೆ. ಹೀಗಾದಲ್ಲಿ ಯಾರೆಲ್ಲಾ ಸಚಿವ ಸ್ಥಾನ ಕಳೆದುಕೊಳ್ಳುತ್ತಾರೆ ಎಂಬುವುದು ಕೂಡಾ ಕುತೂಹಲಕ್ಕೆ ಕಾರಣವಾಗಿದೆ. ಕೆ.ಎಸ್ ಈಶ್ವರಪ್ಪ, ಶಶಿಕಲಾ ಜೊಲ್ಲೆ ಸೇರಿದಂತೆ ಕೆಲವರನ್ನು ಸಂಪುಟದಿಂದ ಕೈ ಬಿಡುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಈ ಬಗ್ಗೆ ಇನ್ನು ಸ್ಪಷ್ಟ ನಿರ್ಧಾರಕ್ಕೆ ಬಂದಿಲ್ಲ.

ಸದ್ಯ ವಿಧಾನಸಭೆ ಚುನಾವಣೆಗೆ ಒಂದುವರೆ ವರ್ಷ ಬಾಕಿ ಇದೆ. ಇಂತಹ ಸಂದರ್ಭದಲ್ಲಿ ಸಂಪುಟ ವಿಸ್ತರಣೆ ಅಥವಾ ಪುನಾರಚನೆ ಕುರಿತಾಗಿ ಸೂಕ್ತ ನಿರ್ಧಾರ ಕೈಗೊಳ್ಳಬೇಕಾಗುತ್ತದೆ. ಸೋಮವಾರ ಸಿಎಂ ಬೊಮ್ಮಾಯಿ ದೆಹಲಿ ಪ್ರವಾಸ ಮಾಡಲಿದ್ದು, ವರಿಷ್ಠರನ್ನು ಭೇಟಿ ಮಾಡಿ ಮಾತುಕತೆ ನಡೆಸಲಿದ್ದಾರೆ. ದೆಹಲಿ ಪ್ರವಾಸದಲ್ಲಿ ವರಿಷ್ಠರ ಭೇಟಿ ಬಳಿಕವಷ್ಟೇ ಸಂಪುಟ ವಿಸ್ತರಣೆಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗಲಿದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *