ವರ್ಗಾವಣೆ ಪಟ್ಟಿಯಲ್ಲಿ ವಿವೇಕಾನಂದ ಹೆಸರು: ಸಿಎಂ ವಿರುದ್ಧ ಎಚ್‍ಡಿಕೆ ವಾಗ್ದಾಳಿ

ಬೆಂಗಳೂರು, ನ.18- ರಾಜ್ಯ ಸರ್ಕಾರದ ಅಧಿಕಾರಿಗಳ ವರ್ಗಾವಣೆಯಲ್ಲಿ ದಂಧೆ ನಡೆಯುತ್ತಿದೆ ಎಂಬ ಆರೋಪ ಮುಂದುವರೆಸಿರುವ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ.

ಈ ಸಂಬಂಧ ಸಾಮಾಜಿಕ ಮಾಧ್ಯಮ ಎಕ್ಸ್‍ನಲ್ಲಿ ಪೋಸ್ಟ್ ಮಾಡಿರುವ ಅವರು, ಬಾಯಿ ತೆರೆದರೆ ಭಗವದ್ಗೀತೆ, ನಾಲಿಗೆ ಮೇಲೆ ನೈತಿಕತೆಯ ನಾಟ್ಯ, ಮಾತಿ ಮಾತಿನಲ್ಲೂ ಮೌಲ್ಯಗಳದ್ದೇ ಮಥನ. ಕೊನೆಗೆ, ಝಣ ಝಣ ಕಾಂಚಾಣ. ಇದೇ ನೋಡಿ ಬಹಿರಂಗವಾದ ಸಿಎಂ ಸಾಹೇಬರ ಸದ್ಯದ ಅಂತರಂಗ ಶುದ್ಧಿ ಎಂದು ಆರೋಪಸಿದ್ದಾರೆ.

ಕರ್ನಾಟಕದ ಕಲೆಕ್ಷನ್ ಪ್ರಿನ್ಸ್ ವಿಡಿಯೋದಲ್ಲಿ ನುಸುಳಿದ್ದ ವಿವೇಕಾನಂದ, 48 ಗಂಟೆಗಳ ಒಳಗಾಗಿಯೇ ವರ್ಗದ ಪಟ್ಟಿಯಲ್ಲಿ ಒಳನುಸಳಿದ್ದು ಹೇಗೆ? ಒಂದು ಸರ್ಕಾರ, ವಿಸ್ಮಯಗಳ ಆಗರ ಎಂದು ವ್ಯಂಗ್ಯವಾಡಿದ್ದಾರೆ.
ಡೂಪ್ಲಿಕೇಟ್ ಸಿಎಂ-ಡಿಸಿಎಂ ಸಲಹೆ ಮೇರೆಗೆ ಕಾಸಿಗಾಗಿ ಹುದ್ದೆ ವಿಡಿಯೋಗೆ ಸಿಎಸ್‍ಆರ್ ಕಥೆ ಕಟ್ಟಿದ್ದ ಮುಖ್ಯಮಂತ್ರಿಗಳ ನೈತಿಕತೆಗೆ ನಯಗಾರಿಕೆಗೆ ನೂರೆಂಟು ನಮನ. ವಿಡಿಯೋ ವಿವೇಕಾನಂದ, ಗುಪ್ತವಾರ್ತೆಯಿಂದ ಮೈಸೂರು ವಿ.ವಿ.ಪುರಂಗೆ ಪೋಸ್ಟಿಂಗ್ ಪಡೆದಿದ್ದು ಹೇಗೆ? ಬರ್ಮುಡಾ ಟ್ರ್ಯಾಂಗಲ್ ರಹಸ್ಯವನ್ನೇ ಮೀರಿಸಿದೆ ಈ ಚಿದಂಬರ ರಹಸ್ಯ. ಪ್ರಶ್ನೆ ಕೇಳುವುದು ನನ್ನ ವಿಧಿ, ಉತ್ತರ ಹೇಳಬೇಕು. ಅದು ನಿಮ್ಮ ದುರ್ವಿಧಿ. ಉತ್ತರಿಸಿ ಸಿದ್ದರಾಮಯ್ಯನವರೇ? ಎಂದು ಪ್ರಶ್ನಿಸಿದ್ದಾರೆ.

ಕುಮಾರಸ್ವಾಮಿಗೆ ಹೊಟ್ಟೆಕಿಚ್ಚು. ದ್ವೇಷದಿಂದ ಮಗನ ವಿರುದ್ಧ ಸುಳ್ಳು ಆರೋಪ ಮಾಡುತ್ತಿದ್ದಾರೆ ಎಂದಲ್ಲವೇ ನೀವು ಹೇಳಿದ್ದು. ಹಾಗಾದರೆ, 71 ಪೊಲೀಸ್ ಇನಸ್ಪೆಕ್ಟರ್‍ಗಳ ವರ್ಗದ ಈ ಯಾದಿಯ 4ನೇ ಹೆಸರಿನಲ್ಲೇ ಅಡಗಿದೆಯಲ್ಲೆ ನಿಮ್ಮ ಸುಲಿಗೆಪುತ್ರನ ಕೆಚ್ಚು. ಕ್ಷೇತ್ರತ್ಯಾಗದ ತ್ಯಾಗಮಯಿ, ಈಗ ವರುಣಾಕ್ಕೆ ವಕ್ಕರಿಸಿದ ಕೆಡಿಪಿ ಕಲಿ ಎಂದು ಅವರು ಆರೋಪಿಸಿದ್ದಾರೆ.

ಈ ಪಾಪದ ಕಾಸಿನ ದುರ್ನಾತ ಅಸಹ್ಯಕರ. ವರ್ಗಾವರ್ಗಿ ಬಜೆಟ್‍ನಲ್ಲಿ ನಿಮ್ಮ ಪಟಾಲಂದು ಶಿಖರ ಸಾಧನೆ. 6 ತಿಂಗಳ ಭರ್ಜರಿ ಅತೀಂದ್ರೀಯ ಅಟ್ಟಹಾಸ. ಕಾಸಿಗಾಗಿ ಹುದ್ದೆ ಕಾಂಗ್ರೆಸ್ ಹುಂಡಿ ಎಂಬ ಸಿನಿಮಾವನ್ನೂ ಮಾಡಿ, ಕೆಡಿಪಿ ಕಲಿಯೇ ನಾಯಕ, ಟೆಂಪರರಿ ಸಿಎಂ-ಟಿಸಿಎಂ ನಿರ್ಮಾಪಕ, ಡೂಪ್ಲಿಕೇಟ್ ಸಿಎಂ-ಡಿಸಿಎಂ ನಿರ್ದೇಶಕ ಎಂದು ಟೀಕಿಸಿದ್ದಾರೆ.

ಸತ್ಯ ಹೇಳಿದರೆ ಗುಂಪು ಗುಂಪಾಗಿ ಮೇಲೆ ಬೀಳುತ್ತೀರಿ. ಬೆದರಿಸುತ್ತೀರಿ. ಕುಮಾರಸ್ವಾಮಿಯದು ಹಿಟ್ ರನ್ ಅಂತೀರಿ, ಸುಳ್ಳು ಎನ್ನುತ್ತೀರಿ. ಕಣ್ಮುಂದೆ ವಿಡಿಯೋ ಸಾಕ್ಷ್ಯವಿದೆ. ರಾಜ್ಯದ ಜನ ನೋಡಿದ್ದಾರೆ. ಪಲಾಯನಕ್ಕೆ ಅವಕಾಶವೇ ಇಲ್ಲ. ನಿಮ್ಮ ಕೌರವ ದುರ್ನೀತಿ ನನ್ನ ಮುಂದೆ ನಡೆಯಲ್ಲ. ನಾನು ಒಬ್ಬನೇ ಒಬ್ಬ, ಅಂಜಿಕೆ ನನ್ನ ರಕ್ತದಲ್ಲೇ ಇಲ್ಲ ಎಂದು ಅವರು ವಾಗ್ದಾಳಿ ನಡೆಸಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *