Farmers Protest; ರೈತರ ಪ್ರತಿಭಟನೆಯಲ್ಲಿ ಮೃತಪಟ್ಟವರ ಗೌರವಾರ್ಥ ಡಿ. 20ರಂದು ಶೋಕ ದಿನ ಆಚರಣೆ!

ಡಿಸೆಂಬರ್ 20ರಂದು ಶೋಕ ದಿನ ಆಚರಣೆ ನಡೆಸುತ್ತಿದ್ದು ಅಂದು ಮೃತ ರೈತರ ಹಳ್ಳಿಗಳಲ್ಲಿ ಹೋರಾಟದ ವೇಳೆ ಹುತಾತ್ಮರಾದ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ನವದೆಹಲಿ (ಡಿಸೆಂಬರ್​ 16): ಇತ್ತೀಚೆಗೆ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರೈತರ ಪಾಲಿಗೆ ಮರಣಶಾಸನವಾಗಿರುವ ಮೂರು ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ವೇಳೆ ಮೃತಪಟ್ಟ ರೈತರ ಗೌರವಾರ್ಥ ಡಿಸೆಂಬರ್ 20ರಂದು ‘ಶೋಕ ದಿನ’ ಆಚರಣೆ ನಡೆಸಲು ಸಂಯುಕ್ತ್ ಕಿಸಾನ್ ಮೋರ್ಚಾ ಕರೆ ಕೊಟ್ಟಿದೆ. ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯುವಂತೆ ಒತ್ತಾಯಿಸಿ ನವೆಂಬರ್ 26ರಿಂದ  ದೆಹಲಿಯ ಗಡಿಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಸಿಂಘು ಗಡಿಯಲ್ಲಿ 32ಕ್ಕೂ ಹೆಚ್ಚು ರೈತ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿದ್ದು ಈ‌ ಹೋರಾಟದ ನೊಗ ಹೊತ್ತಿರುವ  ಸಂಯುಕ್ತ್ ಕಿಸಾನ್ ಮೋರ್ಚಾ ಈಗ ಪ್ರತಿಭಟನೆ ವೇಳೆ ಮೃತಪಟ್ಟ ರೈತರ ಗೌರವಾರ್ಥ ಡಿಸೆಂಬರ್ 20ರಂದು ಶೋಕ ದಿನ ಆಚರಣೆ ನಡೆಸಲು ಕರೆ ಕೊಟ್ಟಿದೆ.

ಅಲ್ಲದೆ. ಕಳೆದ 21 ದಿನಗಳಿಂದ ದೆಹಲಿ ಗಡಿಗಳಲ್ಲಿ ಲಕ್ಷಾಂತರ ರೈತರು ಪ್ರತಿಭಟನೆ ನಡೆಸುತ್ತಿದ್ದು ಈವರೆಗೆ 22 ಮಂದಿ ಮೃತಪಟ್ಟಿದ್ದಾರೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ. ಜೊತೆಗೆ ರೈತರು ಸಾವನ್ನಪ್ಪಲು ಪ್ರಧಾನ ಮಂತ್ರಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವೇ ನೇರ ಕಾರಣ. ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದೆ.

ಡಿಸೆಂಬರ್ 20ರಂದು ಶೋಕ ದಿನ ಆಚರಣೆ ನಡೆಸುತ್ತಿದ್ದು ಅಂದು ಮೃತ ರೈತರ ಹಳ್ಳಿಗಳಲ್ಲಿ ಹೋರಾಟದ ವೇಳೆ ಹುತಾತ್ಮರಾದ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ ಎಂದು ಸಂಯುಕ್ತ್ ಕಿಸಾನ್ ಮೋರ್ಚಾ ತಿಳಿಸಿದೆ.

ದೆಹಲಿ ಗಡಿಯಲ್ಲಿ ಪ್ರತಿಭಟನೆ ನಡೆಸುತ್ತಿರುವ ರೈತರು ಈಗ ಚಳಿಯಿಂದ ತೀವ್ರತೆರನಾದ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಏಕೆಂದರೆ ನಿನ್ನೆ (ಡಿಸೆಂಬರ್ 15) ರಾತ್ರಿ ದೆಹಲಿಯ ತಾಪಮಾನ 4.1 ಸೆಲ್ಸಿಯಸ್ ಡಿಗ್ರಿ ತಲುಪಿತ್ತು. ಪ್ರತಿ ದಿನವೂ ರಾತ್ರಿ ವೇಳೆ ಐದು ಡಿಗ್ರಿಗಳಷ್ಟು ಕಡಿಮೆಯಾಗುತ್ತಿದೆ. ಇದರಿಂದ ಸಹಜವಾಗಿ ಗಡಿಯಲ್ಲಿ, ಅಂದರೆ ಬಯಲಲ್ಲಿ ಪ್ರತಿಭಟನೆ ನಡೆಸುತ್ತಿರುವವರ ಮೇಲೆ ಪ್ರತಿಕೂಲ ಪರಿಣಾಮ ಬೀರುತ್ತದೆ. ಅದರಲ್ಲೂ ವಯಸ್ಸಾದವರು ಅಥವಾ ಇನ್ನಿತರ ಆರೋಗ್ಯದ ಸಮಸ್ಯೆ ಇರುವವರ ಮೇಲೆ ಶೀತ ಗಾಳಿಯು ತುಂಬಾನೇ ದುಷ್ಪರಿಣಾಮ ಬೀರುತ್ತದೆ.

ರೈತರು ಮತ್ತು ಕೇಂದ್ರ ಸರ್ಕಾರದ ನಡುವೆ ಇದುವರೆಗೆ ನಡೆದ 5 ಸುತ್ತಿನ ಸಭೆಗಳು ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಶಾ ನಡೆಸಿದ ಅನೌಪಚಾರಿಕ ಮಾತುಕತೆಗಳೆಲ್ಲವೂ ವಿಫಲವಾಗಿದ್ದು, ರಾಷ್ಟ್ರ ರಾಜಧಾನಿ ದೆಹಲಿ ಗಡಿಯಲ್ಲಿ ರೈತರ ಅನಿರ್ದಿಷ್ಟಾವಧಿ ಪ್ರತಿಭಟನೆ ಮುಂದುವರೆದಿದ್ದು 21ನೇ ದಿನಕ್ಕೆ ಕಾಲಿಟ್ಟಿದೆ.

ಕೇಂದ್ರ ಸಚಿವರು ಕೃಷಿ ಕಾನೂನುಗಳಲ್ಲಿನ ಭಿನ್ನಾಭಿಪ್ರಾಯಗಳನ್ನು ವಿಂಗಡಿಸಿ ಚರ್ಚಿಸಲು ಸಮಿತಿಯೊಂದನ್ನು ರಚಿಸುವ ಪ್ರಸ್ತಾಪವನ್ನು ಮುಂದಿಟ್ಟಿದ್ದಾರೆ. ಜೊತೆಗೆ ಕನಿಷ್ಠ ಬೆಂಬಲ ಬೆಲೆ ಪದ್ದತಿ ಮುಂದುವರೆಸಲು ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಆದರೆ ಈ ಪ್ರಸ್ತಾಪಗಳಿಗೆ ಒಪ್ಪದ ರೈತ ಮುಖಂಡರು ಕೇಂದ್ರ ಸರ್ಕಾರ ಇತ್ತೀಚೆಗೆ ತಂದಿರುವ ಮೂರು ರೈತ ವಿರೋಧಿ ಕೃಷಿ ಕಾನೂನುಗಳನ್ನು ಹಿಂಪಡೆಯಲೇಬೇಕು. ರೈತರ ಎಲ್ಲಾ ಉತ್ಪನ್ನಗಳಿಗೂ ಕನಿಷ್ಠ ಬೆಂಬಲ ಬೆಲೆ ಕೊಡಬೇಕು. ಜೊತೆಗೆ ರೈತರಿಗೆ ಮಾರಕವಾಗಿರುವ ವಿದ್ಯುತ್ ಕಾನೂನನ್ನು ವಾಪಸ್ ಪಡೆಯಲೇಬೇಕು ಎಂದು ಒತ್ತಾಯಿಸಿದ್ದಾರೆ.

ದೇಶದ ವಿವಿಧ ಮೂಲೆಗಳಿಂದ ದೆಹಲಿಯತ್ತ ಧಾವಿಸಿದ್ದ ರೈತರು ನವೆಂಬರ್ 26ರಂದು ದೆಹಲಿಯ ರಾಮಲೀಲಾ ಮೈದಾನದಲ್ಲಿ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದ್ದರು. ಈ ಪ್ರತಿಭಟನೆಗೆ ಮೊದಲು ಒಪ್ಪಿಗೆ ನೀಡಿದ್ದ ಪೊಲೀಸರು ನಂತರ ಪ್ರತಿಭಟನೆ ಹತ್ತಿಕ್ಕಲೆಂದೇ ಕೊರೋನಾ ಕಾರಣವೊಡ್ಡಿ ಒಪ್ಪಿಗೆಯನ್ನು ಹಿಂಪಡೆದರು. ಇದಲ್ಲದೆ ರೈತರು ದೆಹಲಿಯನ್ನು ಪ್ರವೇಶಿಸದಂತೆ ಗಡಿಯಲ್ಲೇ ತಡೆದರು. ಸದ್ಯ ದೆಹಲಿಯ ಗಡಿಯಲ್ಲಿರುವ ರೈತರು ತಾವಿದ್ದ ಸ್ಥಳದಲ್ಲೇ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ. ದೇಶದ ಬೇರೆಡೆಯಲ್ಲೂ ಪ್ರತಿಭಟನೆ ನಡೆಸುವಂತೆ ಕರೆಕೊಟ್ಟಿದ್ದಾರೆ.

ಡಿಸೆಂಬರ್ 12ರಂದು ರೈತರು ಪಂಜಾಬ್, ಹರಿಯಾಣ ಮತ್ತಿತರ ಕಡೆ ಟೋಲ್ ಪ್ಲಾಜಾಗಳನ್ನು ಬಂದ್ ಮಾಡಿ ಮುಷ್ಕರ ನಡೆಸಿದ್ದಾರೆ. ಮೊದಲಿಗೆ ಪಂಜಾಬ್, ಹರಿಯಾಣಗಳಿಂದ ದೆಹಲಿಗೆ ಬರುವ ರಸ್ತೆಗಳನ್ನು ತಡೆದಿದ್ದ ರೈತರು ಈಗ ಉತ್ತರ ಪ್ರದೇಶ ಹಾಗೂ ರಾಜಸ್ಥಾನಗಳಿಂದ ದೆಹಲಿಗೆ ಬರುವ ದೆಹಲಿ-ಜೈಪುರ್ ರಸ್ತೆಯನ್ನೂ ಬಂದ್ ಮಾಡಿದ್ದಾರೆ. ಡಿಸೆಂಬರ್ 12ರಂದು ರೈತರು ಉಪವಾಸ ಸತ್ಯಾಗ್ರಹವನ್ನೂ ನಡೆಸಿದ್ದರು.
ಡಿ. 20ರಂದು ‘ಶೋಕ ದಿನ’ ಆಚರಣೆ ನಡೆಸುತ್ತಿದ್ದು ಅಂದು ಮೃತ ರೈತರ ಹಳ್ಳಿಗಳಲ್ಲಿ ಹೋರಾಟದ ವೇಳೆ ಹುತಾತ್ಮರಾದ ಅವರಿಗೆ ಗೌರವ ಸಲ್ಲಿಸುವ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗುತ್ತದೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *