ಮಂಗಳೂರು ವಿಮಾನ ನಿಲ್ದಾಣ ಖಾಸಗೀಕರಣ: ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್ ನೊಟೀಸ್
ಬೆಂಗಳೂರು: ಮಂಗಳೂರು ವಿಮಾನ ನಿಲ್ದಾಣವನ್ನು ಖಾಸಗೀಕರಣಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿಗೆ ಸಂಬಂಧಪಟ್ಟಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ಮಂಗಳೂರು ಸೇರಿದಂತೆ ದೇಶದ ಮೂರು ವಿಮಾನ ನಿಲ್ದಾಣಗಳನ್ನು ಅದಾನಿ ಎಂಟರ್ ಪ್ರೈಸಸ್ ಲಿಮಿಟೆಡ್ ಗೆ ನೀಡಲು ಕೇಂದ್ರ ಸರ್ಕಾರ 2019ರಲ್ಲಿ ತೆಗೆದುಕೊಂಡ ನಿರ್ಧಾರವನ್ನು ಹಿಂತೆಗೆದುಕೊಳ್ಳಬೇಕೆಂದು ಅರ್ಜಿಯಲ್ಲಿ ಕೋರಲಾಗಿದೆ.
ಈ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಬಜ್ಪೆಯ ವಿಮಾನ ನಿಲ್ದಾಣ ಪ್ರಾಧಿಕಾರದ ಉದ್ಯೋಗಿಗಳ ಒಕ್ಕೂಟ ಸಲ್ಲಿಸಿದ್ದು, ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಅಭಯ್ ಶ್ರೀನಿವಾಸ್ ಒಕಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದಮ್ ನೇತೃತ್ವದ ವಿಭಾಗೀಯ ಪೀಠ ಕೇಂದ್ರ ಸರ್ಕಾರಕ್ಕೆ ನೊಟೀಸ್ ಜಾರಿ ಮಾಡಿದೆ.
ದೇಶದ ಆರು ವಿಮಾನ ನಿಲ್ದಾಣಗಳಾದ ಅಹ್ಮದಾಬಾದ್, ಜೈಪುರ್, ಲಕ್ನೊ, ಗುವಾಹಟಿ, ತಿರುವನಂತಪುರಂ ಮತ್ತು ಮಂಗಳೂರು ವಿಮಾನ ನಿಲ್ದಾಣಗಳನ್ನು ಖಾಸಗಿ-ಸಾರ್ವಜನಿಕ ಸಹಭಾಗಿತ್ವದಡಿ ಮುಂದುವರಿಸಲು 2018ರ ನವೆಂಬರ್ 8ರಂದು ಕೇಂದ್ರ ಸಚಿವ ಸಂಪುಟ ತಾತ್ವಿಕ ಒಪ್ಪಿಗೆ ನೀಡಿತ್ತು. ಕೇಂದ್ರ ಸಂಪುಟದ ನಿರ್ಧಾರ ಕಾನೂನುಬಾಹಿರವಾಗಿದ್ದು, ಅನಿಯಂತ್ರಿತ ಮತ್ತು ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆಯ ವ್ಯಾಪ್ತಿಗೆ ಮೀರಿದೆ ಎಂದು ಘೋಷಿಸುವಂತೆ ಅರ್ಜಿದಾರರು ಒತ್ತಾಯಿಸಿದ್ದಾರೆ.