ರಾಜ್ಯದಲ್ಲಿ ಕೋವಿಡ್ ಹೆಚ್ಚಳ; ಸೋಮವಾರ ತಜ್ಞರ ಜೊತೆ ಬಿಎಸ್‌ವೈ ಮಹತ್ವದ ಸಭೆ
ಹೈಲೈಟ್ಸ್:
- ರಾಜ್ಯದಲ್ಲಿ ಕೋವಿಡ್ ಹೆಚ್ಚಳದ ಆತಂಕ ಮತ್ತೆ ಕಾಡುತ್ತಿದೆ
- ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಎಚ್ಚೆತ್ತುಕೊಂಡಿದೆ
- ಸೋಮವಾರ ಬಿಎಸ್‌ವೈ ತಜ್ಞರ ಜೊತೆ ಸಭೆ ನಡೆಸಲಿದ್ದಾರೆ
ಬೆಂಗಳೂರು: ರಾಜ್ಯದಲ್ಲಿ ಕೋವಿಡ್ 19 ಪ್ರಕರಣಗಳ ಸಂಖ್ಯೆ ತೀವ್ರಗತಿಯಲ್ಲಿ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಸೋಮವಾರ ಹಿರಿಯ ಅಧಿಕಾರಿಗಳು ಹಾಗೂ ತಜ್ಞರ ಜೊತೆಗೆ ಸಭೆ ನಡೆಸಲಿದ್ದಾರೆ.
ಸೋಮವಾರ ಸಂಜೆ 5 ಗಂಟೆಗೆ ವಿಧಾನಸೌಧದಲ್ಲಿ ಸಿಎಂ ಬಿಎಸ್ ಯಡಿಯೂರಪ್ಪ ತಜ್ಞರು ಹಾಗೂ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ ಕೋವಿಡ್ ನಿಯಂತ್ರಣ ನಿಟ್ಟಿನಲ್ಲಿ ಕೈಗೊಳ್ಳಬೆಕಾಗಿರುವ ಕ್ರಮಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ.
ಕೋವಿಡ್ ಲಸಿಕೆಯ ಎರಡನೇ ಡೋಸ್ ನೀಡುವ ಪ್ರಕ್ರಿಯೆ ಆರಂಭ, ಯಶಸ್ವಿಯಾಗುತ್ತಾ ಸರ್ಕಾರದ ಪ್ರಯತ್ನ?
ನೆರೆ ರಾಜ್ಯ ಮಹಾರಾಷ್ಟ್ರದಲ್ಲಿ ಹಾಗೂ ಕೇರಳದಲ್ಲೂ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚಳ ಆಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯದಲ್ಲೂ ಕಟ್ಟೆಚ್ಚರ ವಹಿಸಲಾಗಿತ್ತು. ಆದರೆ ಇದೀಗ ಬೆಂಗಳೂರು ನಗರ ಸೇರಿದಂತೆ ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ತೀವ್ರ ರೀತಿಯಲ್ಲಿ ಹೆಚ್ಚಾಗುತ್ತಿದೆ.
ಕೋವಿಡ್ ತಡೆಗೆ ಕೆಲವೊಂದು ಬಿಗಿ ಕ್ರಮಗಳನ್ನು ಸರ್ಕಾರ ಕೈಗೊಳ್ಳುತ್ತಿದ್ದರೂ ಅದು ಪಾಲನೆ ಆಗುತ್ತಿಲ್ಲ. ಈ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಏನೆಲ್ಲಾ ಬಿಗಿ ಕ್ರಮ ಕೈಗೊಳ್ಳಬೇಕು ಎಂಬ ನಿಟ್ಟಿನಲ್ಲಿ ಸಭೆಯಲ್ಲಿ ಪ್ರಮುಖ ಚರ್ಚೆಗಳು ನಡೆಯುವ ಸಾಧ್ಯತೆ ಇದೆ.
ಶನಿವಾರ ರಾಜ್ಯದಲ್ಲಿ 921 ಹೊಸ ಪ್ರಕರಣಗಳು ಪತ್ತೆಯಾಗಿವೆ. ಒಟ್ಟು ಸಕ್ರಿಯ ಪ್ರಕರಣಗಳ ಸಂಖ್ಯೆ 8042 ರಷ್ಟಿದೆ. ಈ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕೆಯ ಕ್ರಮಗಳನ್ನು ಕೈಗೊಳ್ಳಲು ಸರ್ಕಾರ ಮುಂದಾಗಿದೆ.