Karnataka Oxygen Crisis: ಕರ್ನಾಟಕಕ್ಕೆ ಆಮ್ಲಜನಕ ಪೂರೈಕೆ ಆದೇಶ ಎತ್ತಿ ಹಿಡಿದ ಸುಪ್ರೀಂ ಕೋರ್ಟ್; ಕೇಂದ್ರ ಸರ್ಕಾರಕ್ಕೆ ಮುಖಭಂಗ
ನವದೆಹಲಿ, ಮೇ 6: ಕರ್ನಾಟಕಕ್ಕೆ ಹೆಚ್ಚುವರಿ ಆಕ್ಸಿಜನ್ ಪೂರೈಕೆ ಮಾಡಲು ಸಾಧ್ಯವಿಲ್ಲ ಎಂದಿದ್ದ ಕೇಂದ್ರ ಸರ್ಕಾರಕ್ಕೆ ಭಾರೀ ಹಿನ್ನಡೆಯಾಗಿದ್ದು, ಕರ್ನಾಟಕ ಹೈಕೋರ್ಟ್ನ ಆದೇಶವನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಕರ್ನಾಟಕದಲ್ಲಿ ಆಕ್ಸಿಜನ್ ಕೊರತೆಯಿಂದ ಸಾಕಷ್ಟು ಜನರು ಸಾವನ್ನಪ್ಪಿದ ಘಟನೆ ನಡೆದ ಬಳಿಕ ರಾಜ್ಯಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಕೆ ಮಾಡುವಂತೆ ರಾಜ್ಯ ಹೈಕೋರ್ಟ್ ಆದೇಶ ನೀಡಿತ್ತು. ಆ ಆದೇಶವನ್ನು ಪ್ರಶ್ನಿಸಿ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಿತ್ತು. ಆ ಅರ್ಜಿಯ ವಿಚಾರಣೆಯನ್ನು ಇಂದು ನಡೆಸಿರುವ ಸುಪ್ರೀಂ ಕೋರ್ಟ್ ಕರ್ನಾಟಕ ಹೈಕೋರ್ಟ್ನ ಆದೇಶಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದಿದೆ.
ರಾಜ್ಯ ಹೈಕೋರ್ಟ್ ಆದೇಶವನ್ನು ಪ್ರಶ್ನಿಸಿ ‘ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲು ಸಾಧ್ಯವಿಲ್ಲ’ ಎಂದು ಕೇಂದ್ರ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂ ಕೋರ್ಟ್, ಕರ್ನಾಟಕ ಹೈಕೋರ್ಟ್ ನೀಡಿರುವ ನಿರ್ದೇಶನಗಳಲ್ಲಿ ಯಾವುದೇ ತಪ್ಪಿಲ್ಲ. ರಾಜ್ಯದಲ್ಲಿ ಆಮ್ಲಜನಕದ ಬೇಡಿಕೆ ಮತ್ತು ಪೂರೈಕೆಯನ್ನು ಪರಿಶೀಲಿಸುವಂತೆ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ ನಿರ್ದೇಶನ ನೀಡಿತ್ತು. ಈ ನಿಟ್ಟಿನಲ್ಲಿ ಕರ್ನಾಟಕ ಸರ್ಕಾರದ ಪ್ರಾತಿನಿಧ್ಯದ ದೃಷ್ಟಿಯಿಂದ, ಆಮ್ಲಜನಕದ ಬೇಡಿಕೆಯನ್ನು ಪೂರೈಸಬೇಕಾಗುತ್ತದೆ ಎಂದು ಹೇಳಿದೆ.
4 ದಿನಗಳಲ್ಲಿ ರಾಜ್ಯದ ಮನವಿ ಪರಿಗಣಿಸಲು ಕೇಂದ್ರಕ್ಕೆ ನಿರ್ದೇಶನ ನೀಡಿದ ಸುಪ್ರೀಂ ಕೋರ್ಟ್ ಅಲ್ಲಿಯವರೆಗೂ ತಕ್ಷಣ ಜಾರಿ ಬರುವಂತೆ ಹೈಕೋರ್ಟ್ ಆದೇಶದ ಪ್ರಕಾರ ಪ್ರತಿ ದಿನ 1,200 ಮೆಟ್ರಿಕ್ ಟನ್ ಆಮ್ಲಜನಕ ಒದಗಿಸಲು ಸೂಚನೆ ನೀಡಿದೆ. ಇದೇ ವೇಳೆ ‘ಕರ್ನಾಟಕದ ಜನರನ್ನು ಕಷ್ಟಕ್ಕೆ ದೂಡಲು ಸಾಧ್ಯವಿಲ್ಲ, ಆದುದರಿಂದ ಕರ್ನಾಟಕ ಹೈಕೋರ್ಟ್ ನೀಡಿರುವ ಆದೇಶ ಸರಿ ಇದೆ’ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.
ಕೇಂದ್ರ ಸರ್ಕಾರಕ್ಕೆ ತೀವ್ರ ಮುಖಭಂಗ:
ದೆಹಲಿ ಆಕ್ಸಿಜನ್ ಕೊರತೆ ಪ್ರಕರಣ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಚಂದ್ರಚೂಡ್ ನೇತೃತ್ವದ ಪೀಠ ಎದುರು ನಿನ್ನೆ (ಮೇ 6ರಂದು) ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರು ‘ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲು ಸಾಧ್ಯವಿಲ್ಲ. ಈ ವಿಷಯವನ್ನು ಸಹ ಪರಿಗಣಿಸಬೇಕು’ ಎಂದು ಮನವಿ ಮಾಡಿಕೊಂಡಿದ್ದರು. ಕರ್ನಾಟಕ ಹೈಕೋರ್ಟ್ ಆದೇಶ ಪ್ರಶ್ನಿಸಿ ಅರ್ಜಿ ಸಲ್ಲಿಸಿರುವುದಾಗಿ ಕೋರ್ಟ್‌ಗೆ ಮಾಹಿತಿ ನೀಡಿದ್ದರು. ಆಗ ಶುಕ್ರವಾರ ವಿಚಾರಣೆ ನಡೆಸುವುದಾಗಿ ತಿಳಿಸಲಾಗಿತ್ತು. ಇಂದು ವಿಚಾರಣೆ ನಡೆಸಿ ರಾಜ್ಯ ಹೈಕೋರ್ಟ್ ಆದೇಶವನ್ನೇ ಎತ್ತಿ ಹಿಡಿದಿರುವುದರಿಂದ ಕರ್ನಾಟಕಕ್ಕೆ ಹೆಚ್ಚುವರಿ ಆಮ್ಲಜನಕ ನೀಡಲ್ಲ ಎಂದು ಹಠ ಹಿಡಿದಿದ್ದ ಕೇಂದ್ರ ಸರ್ಕಾರಕ್ಕೆ ಭಾರೀ ಮುಖಭಂಗವಾದಂತಾಗಿದೆ.
ರಾಜ್ಯದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನೇ ದಿನೇ ಏರುತ್ತಲೇ ಇದೆ. ಬೆಂಗಳೂರಿನಲ್ಲಂತೂ ಪರಿಸ್ಥಿತಿ ಸದ್ಯಕ್ಕೆ ನಿಯಂತ್ರಣದಲ್ಲಿ ಸಿಗುವ ಯಾವುದೇ ಲಕ್ಷಣ ಗೋಚರಿಸುತ್ತಿಲ್ಲ. ಈ ನಡುವೆ ಸಾವಿನ ಸಂಖ್ಯೆಯಲ್ಲೂ ಗಣನೀಯ ಏರಿಕೆಯಾಗಿದೆ. ಆಕ್ಸಿಜನ್ ಕೊರತೆ ಮತ್ತು ಐಸಿಯು ಬೆಡ್ ಇಲ್ಲದಿರುವುದೇ ಈ ಎಲ್ಲಾ ಸಾವಿಗೆ ಪ್ರಮುಖ ಕಾರಣವಾಗಿದೆ. ಈ ನಡುವೆ ಚಾಮರಾಜನಗರದಲ್ಲಿ ಆಕ್ಸಿಜನ್ ಇಲ್ಲದೆ 24 ಜನ ಮೃತಪಟ್ಟ ಪ್ರಕರಣ ದೇಶದಾದ್ಯಂತ ದೊಡ್ಡ ಮಟ್ಟದಲ್ಲಿ ಸದ್ದು ಮಾಡುತ್ತಿದೆ. ಈ ಹಿನ್ನಲೆಯಲ್ಲಿ ರಾಜ್ಯ ಹೈಕೋರ್ಟ್ ಕೇಂದ್ರ ಸರ್ಕಾರಕ್ಕೆ 1,200 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸುವಂತೆ ಸೂಚಿಸಿತ್ತು. ಆದರೆ ಹೈಕೋರ್ಟ್ ಸೂಚನೆ ವಿರುದ್ಧ ಕೇಂದ್ರ ಸರ್ಕಾರ ಸುಪ್ರೀಂ ಕೋರ್ಟ್ ಮೆಟ್ಟಿಲೇರಿತ್ತು.