ಪಾಸಿಟಿವಿಟಿ ಇರುವ ಕಡೆ ಟೆಸ್ಟ್ ಹೆಚ್ಚಿಸಲು, ಗ್ರಾಮೀಣ ಭಾಗದಲ್ಲಿ ಆರೋಗ್ಯ ಸೌಕರ್ಯ ಹೆಚ್ಚಿಸಲು ಪ್ರಧಾನಿ ಮೋದಿ ಕರೆ

ನವದೆಹಲಿ (ಮೇ 15): ದೇಶದಲ್ಲಿ ಎರಡನೇ ಸುತ್ತಿನಲ್ಲಿ ಮಾರಕ‌ ಕಾಯಿಲೆ ಕೊರೋನಾ ಅಲೆ ವ್ಯಾಪಕವಾಗಿ ಹರಡುತ್ತಿದ್ದು ಆತಂಕವನ್ನು ಸೃಷ್ಟಿಸುತ್ತಿದೆ.‌ ಪ್ರತಿ‌ ದಿನ ಮೂರು ಲಕ್ಷಕ್ಕೂ ಹೆಚ್ಚು ಜನ ಸೋಂಕು ಪೀಡಿತರಾಗುತ್ತಿದ್ದಾರೆ. ಅಲ್ಲದೇ ಪ್ರತಿ ದಿನ ಸುಮಾರು ನಾಲ್ಕು ಸಾವಿರ ಜನ‌ ಕೊರೋನಾ ಮಾಹಾಮಾರಿಗೆ ಬಲಿ‌ ಆಗುತ್ತಿದ್ದಾರೆ. ಈ‌ ಹಿನ್ನಲೆಯಲ್ಲಿ ಕೇಂದ್ರ ಸರ್ಕಾರದ ಉನ್ನಾತಾಧಿಕಾರಿಗಳ ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಪಾಸಿಟಿವಿಟಿ ಇರುವ ಕಡೆ ಕೊರೋನಾ ಟೆಸ್ಟ್ ಹೆಚ್ಚು ಮಾಡುವಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವಂತೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ಮೂಲಕ ಸಭೆ ನಡೆಸಿದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸುಮಾರು ಮೂರು ಗಂಟೆಗಳ ಕಾಲ ದೇಶದಲ್ಲಿ ಕೊರೋನಾ ತೀವ್ರವಾಗಿ ಹರಡುತ್ತಿರುವ ಬಗ್ಗೆ, ಮೂರನೇ ಹಂತದ ಲಸಿಕೆ ಅಭಿಯಾನ ನಡೆಯುತ್ತಿರುವ ಬಗ್ಗೆ ಹಾಗೂ ಕೊರೋನಾ ಲಸಿಕೆಗಳ ಸಮಸ್ಯೆ ಕಂಡುಬರುತ್ತಿರುವ ಬಗ್ಗೆ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ಬಳಿಕ ಅಧಿಕಾರಿಗಳಿಗೆ ಪಾಸಿಟಿವಿಟಿ ಇರುವ ಕಡೆ ಕೊರೋನಾ ಟೆಸ್ಟ್ ಹೆಚ್ಚು ಮಾಡುವಂತೆ ಹಾಗೂ ಗ್ರಾಮೀಣ ಭಾಗದಲ್ಲಿ ಆರೋಗ್ಯ ಮೂಲ ಸೌಕರ್ಯ ಹೆಚ್ಚಿಸುವಂತೆ ಸೂಚನೆ ನೀಡಿದ್ದಾರೆ ಎಂದು ಕೇಂದ್ರ ಸರ್ಕಾರದ ಮೂಲಗಳಿಂದ ತಿಳಿದುಬಂದಿದೆ.

ಕೊರೋನಾ ಎರಡನೇ ಅಲೆ ಗ್ರಾಮೀಣ ಭಾಗದಲ್ಲಿ ಪಸರಿಸಿರುವುದರಿಂದ ಹಳ್ಳಿಗಳಲ್ಲಿ ಆರೋಗ್ಯ ಮೂಲಸೌಕರ್ಯ ಹೆಚ್ಚಿಸುವ ಜೊತೆಗೆ ಮನೆ ಮನೆಗೆ ತೆರಳಿ ಟೆಸ್ಟ್ ಮಾಡುವ ಬಗ್ಗೆ ಗಮನ ಹರಿಸುವಂತೆ ರಾಜ್ಯ ಸರ್ಕಾರಗಳಿಗೆ ಸೂಚನೆ ನೀಡಿ. ಆಶಾ ಮತ್ತು ಅಂಗನವಾಡಿ ಕಾರ್ಯಕರ್ತೆಯರ ಜೊತೆಗೆ ನಿರಂತರವಾಗಿ ಸಂಪರ್ಕದಲ್ಲಿದ್ದು ಕೊರೋನಾ‌ ವಿರುದ್ಧದ ಹೋರಾಟ ಯಶಸ್ವಿಯಾಗಿ ನೋಡಿಕೊಳ್ಳಬೇಕು ಎಂದು ತಿಳಿಸಿದ್ದಾರೆ ಎನ್ನಲಾಗಿದೆ.
ಜನರಿಗೆ ಕೊರೋನಾ ಪ್ರಕರಣಗಳ ಬಗ್ಗೆ ಸರಿಯಾದ ಮಾಹಿತಿಯನ್ನು ತಿಳಿಸಬೇಕು.‌ ರಾಜ್ಯ ಸರ್ಕಾರಗಳು ಪ್ರಕರಣಗಳು ಹೆಚ್ಚಾಗುತ್ತಿರುವ ಬಗ್ಗೆ ಗಮನಹರಿಸಬೇಕು. ಈ ಬಗ್ಗೆ ಕೇಂದ್ರ ಸರ್ಕಾರದ ಉನ್ನತಾಧಿಕಾರಿಗಳು ರಾಜ್ಯ ಸರ್ಕಾರಗಳಿಗೆ ಸೂಚಿಸಬೇಕು ಎಂದರಲ್ಲದೆ ಕೇಂದ್ರ ಸರ್ಕಾರ ರಾಜ್ಯಗಳಿಗೆ ನೀಡಿರುವ ವೆಂಟಿಲೇಟರ್‌ಗಳನ್ನು ಸಮರ್ಪಕವಾಗಿ ಬಳಕೆ ಮಾಡಿಕೊಳ್ಳದ ಕೆಲವು ರಾಜ್ಯಗಳ ಬಗ್ಗೆ ಪ್ರಧಾನಿ ಮೋದಿ ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ‌ ಈ ಬಗ್ಗೆ ಆಡಿಟ್ ನಡೆಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು. ಲಸಿಕೆ ಅಭಿಯಾನ ತೀವ್ರಗೊಳಿಸುವಂತೆ ತಿಳಿಸಿದರು ಎಂದು ಗೊತ್ತಾಗಿದೆ.

ಶುಕ್ರವಾರ 3,26,098 ಪ್ರಕರಣಗಳು ಪತ್ತೆಯಾಗಿವೆ. ಡಿಸ್ಚಾರ್ಜ್ ಆದವರು 3,53,299 ಜನ. ದೇಶದಲ್ಲಿ ಕೊರೋನಾ ಸೋಂಕು ಪೀಡಿತರ ಸಂಖ್ಯೆ 2,43,72,907ಕ್ಕೆ ಏರಿಕೆ ಆಗಿದೆ.‌ ದಿನದಿಂದ ದಿನಕ್ಕೆ ಕೊರೋನಾ ರೋಗಕ್ಕೆ ಬಲಿ ಆಗುತ್ತಿರುವವರ ಸಂಖ್ಯೆ ಕೂಡ‌ ಹೆಚ್ಚಾಗಿದೆ. ಶುಕ್ರವಾರ  3,890 ಜನರು ಬಲಿ ಆಗಿದ್ದು ಈವರೆಗೆ ಕೊರೋನಾದಿಂದ ಸತ್ತವರ ಸಂಖ್ಯೆ 2,66,207ಕ್ಕೆ ಏರಿಕೆ ಆಗಿದೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *