ಕೊರೊನಾವನ್ನು ಸುಳ್ಳು-ಮೋಸಗಳ ಫೇಕುಗಿರಿಯಿಂದ ಎದುರಿಸುವುದಲ್ಲ: ಸಿದ್ದರಾಮಯ್ಯ ವ್ಯಂಗ್ಯ

ಹೈಲೈಟ್ಸ್‌:

  • ರಾಜ್ಯ ಸರ್ಕಾರದ ವಿರುದ್ಧ ಸಿದ್ದರಾಮಯ್ಯ ಸರಣಿ ಟ್ವೀಟ್
  • ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಸುತ್ತೋಲೆ
  • ಜನರಲ್ಲಿ ಸುಳ್ಳು ಭರವಸೆ ಮೂಡಿಸುವ ಪ್ರಯತ್ನ
  • ಲಕ್ಷಣವಿಲ್ಲದವರಿಗೂ ಕೋವಿಡ್ ಪರೀಕ್ಷೆ ನಡೆಸಿ

ಬೆಂಗಳೂರು: ಕೋವಿಡ್ ಪರೀಕ್ಷೆಗಳನ್ನು ಕಡಿಮೆ ಮಾಡುವ ಮೂಲಕ, ರಾಜ್ಯದಲ್ಲಿ ಸೋಂಕಿನ ಪ್ರಮಾಣ ಇಳಿಕೆಯಾಗುತ್ತಿದೆ ಎಂದು ಜನರಲ್ಲಿ ಸುಳ್ಳು ಭಾವನೆಗಳನ್ನು ಮೂಡಿಸಲು ರಾಜ್ಯ ಸರ್ಕಾರ ಪ್ರಯತ್ನಿಸುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ, ವಿಪಕ್ಷ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.

ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರು ಕಳೆದ ತಿಂಗಳು ಹೊರಡಿಸಿದ್ದ ಸುತ್ತೋಲೆಯ ಪ್ರತಿಯನ್ನು ಹಂಚಿಕೊಂಡಿರುವ ಸಿದ್ದರಾಮಯ್ಯ, ರೋಗ ಲಕ್ಷಣವಿಲ್ಲ ಎಂಬ ಕಾರಣಕ್ಕೆ ಸೋಂಕಿತರ ಸಂಪರ್ಕದಲ್ಲಿರುವವರನ್ನೂ ಪರೀಕ್ಷೆ ಮಾಡದೆ ಇರುವ ಸೂಚನೆ ಅಪಾಯಕಾರಿಯಾಗಿದೆ ಎಂದಿದ್ದಾರೆ.

ಕೊರೊನಾ ಪರೀಕ್ಷೆ ಕಡಿಮೆಮಾಡಿ, ಸೋಂಕು ಇಳಿಮುಖವಾಗುತ್ತಿದೆ ಎಂಬ ಸುಳ್ಳು ಭರವಸೆಯನ್ನು ಜನರಲ್ಲಿ ಬಿತ್ತುವ ಬಿಜೆಪಿ ಸರ್ಕಾರದ ನಿರ್ಧಾರ ಕೊಲೆಗಡುಕತನದ್ದು. ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಮತ್ತು ಸಚಿವ ಸುಧಾಕರ್ ಅವರ ಸುಳ್ಳುಗಳಿಗೆ ರಾಷ್ಟ್ರೀಯ ಆರೋಗ್ಯ ಅಭಿಯಾನದ ನಿರ್ದೇಶಕರ ಈ ಸುತ್ತೋಲೆ ಸಾಕ್ಷಿ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ರಾಜ್ಯದಲ್ಲಿ ಕೊರೊನಾ ಸೋಂಕು ಕಡಿಮೆಯಾಗುತ್ತಿದೆ ಎಂಬ ಯಡಿಯೂರಪ್ಪ ಅವರ ಸುಳ್ಳು ಪ್ರಚಾರಕ್ಕೆ ಕಾರಣ, ರೋಗ ಲಕ್ಷಣಗಳಿಲ್ಲದವರ (ಅಸಿಂಪ್ಟಾಮ್ಯಾಟಿಕ್ಸ್) ಸೋಂಕು ಪರೀಕ್ಷೆ ಮಾಡಲೇ ಬಾರದು ಎನ್ನುವ ಬಿಜೆಪಿ ಸರ್ಕಾರದ ಸುತ್ತೋಲೆ ಕಾರಣ. ಇದರಿಂದಾಗುವ ಅಪಾಯ ಗೊತ್ತೇ ಮುಖ್ಯಮಂತ್ರಿಗಳೇ? ಎಂದು ಪ್ರಶ್ನಿಸಿದ್ದಾರೆ.

ರೋಗ ಲಕ್ಷಣಗಳಿಲ್ಲ ಎನ್ನುವ ಕಾರಣಕ್ಕೆ ಪರೀಕ್ಷೆ ಮಾಡದಿರುವ ಒಬ್ಬ ಸೋಂಕಿತ ವ್ಯಕ್ತಿ ತನ್ನ ಸಂಪರ್ಕಕ್ಕೆ ಬರುವ ನಾಲ್ಕಾರು ಮಂದಿಗೆ‌ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಲಾಕ್ ಡೌನ್ ಹೊರತಾಗಿಯೂ ಕೊರೊನಾ ನಿಯಂತ್ರಣಕ್ಕೆ ಬರದೆ ಇರಲು ಸರ್ಕಾರದ ಈ ಮೂರ್ಖ ನಿರ್ಧಾರ ಕಾರಣ.

ಮೇ ಮೊದಲ ವಾರದಲ್ಲಿ 49,000ದಷ್ಟಿದ್ದ ಕೊರೊನಾ ಸೋಂಕಿತರ ಸಂಖ್ಯೆ, ಲಾಕ್‌ಡೌನ್ ಹೇರಿದ ಕೆಲವೇ ದಿನಗಳಲ್ಲಿ 38,000ಕ್ಕೆ ಇಳಿಯಿತು ಎಂದು ಮುಖ್ಯಮಂತ್ರಿ ಕೊಚ್ಚಿಕೊಂಡರು. ಆದರೆ, ಏಪ್ರಿಲ್ ಒಂದರಂದು ನಡೆದಿದ್ದ 1,77,560 ಕೊರೊನಾ ಪರೀಕ್ಷೆ, ಮೇ 17ಕ್ಕೆ 97000ಕ್ಕೆ ಕುಸಿದಿರುವುದನ್ನು ಮಾತ್ರ ಅವರು ಹೇಳಿಲ್ಲ ಎಂದು ಟೀಕಿಸಿದ್ದಾರೆ.

ಸುಳ್ಳು ಲೆಕ್ಕದಿಂದ ಜನರ ದಾರಿತಪ್ಪಿಸುವ ಕೀಳುಬುದ್ದಿಯನ್ನು ಬಿಟ್ಟು, ತಕ್ಷಣ ಮುಖ್ಯಮಂತ್ರಿ ಅವರು ರೋಗಲಕ್ಷಣಗಳಿಲ್ಲದವರ ಕೊರೊನಾ ಪರೀಕ್ಷೆ‌ ಮಾಡುವ ಅಭಿಯಾನವನ್ನು ಪುನರಾರಂಭಿಸಬೇಕೆಂದು ಒತ್ತಾಯಿಸುತ್ತೇನೆ. ಕೊರೊನಾವನ್ನು ಔಷಧಿ-ಚಿಕಿತ್ಸೆಯ ಮೂಲಕ ಎದುರಿಸಬೇಕೇ ಹೊರತು ಸುಳ್ಳು-ಮೋಸಗಳ ಫೇಕುಗಿರಿಯಿಂದ ಅಲ್ಲ ಎಂದು ವ್ಯಂಗ್ಯವಾಡಿದ್ದಾರೆ.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *