ಯಡಿಯೂರಪ್ಪ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ, ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ಬದ್ಧ: ತೆಲ್ಕೂರ್
ಕಲಬುರಗಿ :ಬಿಜೆಪಿ ಪಕ್ಷದಲ್ಲಿ ಒಂದಿಟ್ಟು ಭಿನ್ನಮತ ಇರುವುದು ಎಲ್ಲರಿಗೂ ಗೊತ್ತಿರುವ ವಿಚಾರ. ಆದಾಗ್ಯೂ, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ವಿಚಾರಕ್ಕೆ ಬಂದಾಗ ಅವರು ತುಂಬಾ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ. ಆದಾಗ್ಯೂ, ಪಕ್ಷದ ವರಿಷ್ಠರು ಏನೇ ನಿರ್ಧಾರ ಕೈಗೊಂಡರೂ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ಈಶಾನ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಹಾಗೂ ಜಿಲ್ಲಾ ಸಹಕಾರ ಬ್ಯಾಂಕ್ ಅಧ್ಯಕ್ಷರೂ ಆಗಿರುವ ಸೇಡಂ ಕ್ಷೇತ್ರದ ಶಾಸಕ ರಾಜಕುಮಾರ್ ಪಾಟೀಲ್ ತೆಲ್ಕೂರ್ ಅವರು ಹೇಳಿದರು.
ನಗರದಲ್ಲಿ ಬುಧವಾರ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ ಕೋವಿಡ್ ಲಸಿಕಾ ವಾಹನಕ್ಕೆ ಚಾಲನೆ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೆಲ ಶಾಸಕರು ಮುಖ್ಯಮಂತ್ರಿಗಳ ವಿರುದ್ಧ ಬಹಿರಂಗ ಅತೃಪ್ತಿ ವ್ಯಕ್ತಪಡಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳು ಬಹಿರಂಗಗೊಳಿಸುತ್ತಿರುವುದನ್ನು ಕಡಿವಾಣ ಹಾಕುವುದಕ್ಕಾಗಿಯೇ ಪಕ್ಷದ ರಾಜ್ಯ ಉಸ್ತುವಾರಿ ಅರುಣಸಿಂಗ್ ಅವರು ಬೆಂಗಳೂರಿಗೆ ಆಗಮಿಸಿದ್ದಾರೆ. ಸಮಾಲೋಚನೆ ನಂತರ ರಾಷ್ಟ್ರೀಯ ನಾಯಕರು ಕೈಗೊಳ್ಳುವ ಯಾವುದೇ ನಿರ್ಧಾರಕ್ಕೂ ನಮ್ಮ ಬೆಂಬಲ ಇರುತ್ತದೆ ಎಂದರು.
ಕಲ್ಯಾಣ ಕರ್ನಾಟಕ ಭಾಗಕ್ಕೆ ಸಚಿವ ಸಂಪುಟದಲ್ಲಿ ಪ್ರಾತಿನಿಧ್ಯ ಸಿಗದಿರುವ ಕುರಿತು ನಾವು ಸಹ ಅರುಣಸಿಂಗ್ ಅವರೊಂದಿಗೆ ಚರ್ಚಿಸುತ್ತೇವೆ. ಈಗಾಗಲೇ ಈ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಗಮನಕ್ಕೂ ತಂದಿದ್ದೇವೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗಾಗಿ ಕಲ್ಯಾಣ ಕರ್ನಾಟಕಕ್ಕೆ ಸಚಿವ ಸಂಪುಟದಲ್ಲಿ ಸ್ಥಾನ ಕಲ್ಪಿಸುವ ಕುರಿತು ವರಿಷ್ಠರೊಂದಿಗೂ ಮಾತನಾಡುತ್ತೇವೆ ಎಂದು ಅವರು ಹೇಳಿದರು.