Karnataka Weather Today: ಕರಾವಳಿ ಜಿಲ್ಲೆಗಳಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ; ಬೆಳಗಾವಿಯಲ್ಲಿ ಪ್ರವಾಹ ಭೀತಿ
Karnataka Monsoon Rain: ಬೆಂಗಳೂರು(ಜೂ.19): ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ವಿವಿಧೆಡೆ ಎಡೆಬಿಡದೆ ಧಾರಾಕಾರ ಮಳೆ ಸುರಿಯುತ್ತಿದೆ. ಮಲೆನಾಡು, ಕರಾವಳಿ ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಮಲೆನಾಡಿನ ಹಲವೆಡೆ ಮರಗಳು ಧರೆಗುರುಳಿವೆ, ರಸ್ತೆ ಹಾಗೂ ಸೇತುವೆಗಳು ಜಲಾವೃತವಾಗಿವೆ. ಕೃಷಿ ಭೂಮಿಗಳು ಮಳೆ ನೀರಿನಿಂದ ತುಂಬಿ ಹೋಗಿವೆ. ಕಳೆದ ನಾಲ್ಕು ದಿನಗಳಿಂದ ಬಣಕಲ್, ಕೊಟ್ಟಿಗೆಹಾರ, ಬಾಳೂರು ಮತ್ತು ಚಾರ್ಮಾಡಿ ಘಾಟ್ ಸುತ್ತಮುತ್ತ ಅಧಿಕ ಮಳೆಯಾಗುತ್ತಿದ್ದು, 39.58 ಸೆಂ.ಮೀ. ದಾಖಲಾಗಿದೆ.
ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದು ಭಾರೀ ಮಳೆಯಾಗಲಿದ್ದು, ರೆಡ್ ಅಲರ್ಟ್ ಘೋಷಿಸಲಾಗಿದೆ. ಜೊತೆಗೆ ಕೊಡಗು, ಹಾಸನ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳಲ್ಲಿ ಇಂದು ಕೂಡ ಮಳೆ ಮುಂದುವರೆಯಲಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಧಿಕ ಮಳೆಯಾಗುವ ಸಾಧ್ಯತೆ ಇರುವುದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಎಚ್ಚರಿಕೆ ನೀಡಲಾಗಿದೆ. ಕರಾವಳಿ ಪ್ರದೇಶಗಳಲ್ಲಿ ಗಾಳಿಯು ಗಂಟೆಗೆ 40-50 ಕಿ.ಮೀ. ವೇಗದಲ್ಲಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿಯೂ ಇಂದು ಭಾರೀ ಮಳೆಯಾಗುವ ಮುನ್ಸೂಚನೆ ಇದೆ ಎಂದು ಹವಾಮಾನ ಇಲಾಖೆಯ ಅಧಿಕಾರಿಗಳು ಮುನ್ಸೂಚನೆ ನೀಡಿದ್ದಾರೆ. ನೈರುತ್ಯ ಮಾನ್ಸೂನ್ ಇಂದು ಉತ್ತರ ಒಳನಾಡು, ಕರಾವಳಿ ಹಾಗೂ ದಕ್ಷಿಣ ಒಳನಾಡಿನಲ್ಲಿ ತೀವ್ರವಾಗಲಿದೆ. ಇಂದು ಕರಾವಳಿ, ಮಲೆನಾಡು ಮತ್ತು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ ಎಂದು ಅಧಿಕಾರಿಗಳು ಎಚ್ಚರಿಕೆ ನೀಡಿದ್ದಾರೆ.
ಹಲವೆಡೆ ವಿದ್ಯುತ್ ಕಂಬಗಳು ಧರೆಗುರುಳಿದ್ದು, ವಿದ್ಯುತ್ ಸಂಪರ್ಕದಲ್ಲಿ ವ್ಯತ್ಯಯವಾಗಿದೆ. ಮಳೆಯಿಂದಾಗಿ ಎಸ್ಎಸ್ಎಲ್ಸಿ ವಿದ್ಯಾರ್ಥಗಳಿಗೆ ಆನ್ಲೈನ್ ತರಗತಿ ಕೇಳಲು ಕಷ್ಟವಾಗುತ್ತಿದೆ. ಮನೆಯೊಳಗಿದ್ದರೆ ನೆಟ್ವರ್ಕ್ ಸಿಗುತ್ತಿಲ್ಲ. ಈಚೆ ಬಂದರೆ ಮಳೆ. ಹೀಗೆ ಕಷ್ಟ ಅನುಭವಿಸುತ್ತಿದ್ದಾರೆ.
ಭಾರೀ ಮಳೆಗೆ ಹೇಮಾವತಿ ನದಿ ಮೈದುಂಬಿ ಹರಿಯುತ್ತಿದ್ದು, ಅಪಾಯ ಮಟ್ಟದಲ್ಲಿದೆ. ಬಣಕಲ್ನಲ್ಲಿ ಬೃಹತ್ ಮರ ಉರುಳಿ ಬಿದ್ದಿದ್ದು, ಸುಮಾರು 7 ಗಂಟೆಗಳ ಕಾಲ ಸಂಚಾರ ಅಸ್ತವ್ಯಸ್ತವಾಯಿತು. ಬೆಳಗಾವಿಯಲ್ಲೂ ರಣಮಳೆ ಸುರಿಯುತ್ತಿದ್ದು, ನದಿಗಳು ಅಪಾಯದ ಮಟ್ಟ ಮೀರಿ ಹರಿಯುತ್ತಿವೆ. ಘಟಪ್ರಭಾ ಹಾಗೂ ಕೃಷ್ಣಾ ನದಿಗಳು ಪ್ರವಾಹ ಭೀತಿ ಸೃಷ್ಟಿಸಿವೆ.
ಮಳೆಗೆ ಕೊಚ್ಚಿ ಹೋದ ರೈತ
ಬೆಳಗಾವಿಯಲ್ಲಿ ವರುಣನ ಅಬ್ಬರ ಮುಂದುವರೆದಿದೆ. ಕಳೆದ 5 ದಿನಗಳಿಂದ ನಿರಂತರವಾಗಿ ಮಳೆಯಾಗುತ್ತಿದೆ. ಮಾರ್ಕಂಡೇಯ ನದಿಯಲ್ಲಿ ಓರ್ವ ರೈತ ಕೊಚ್ಚಿ ಹೋಗಿದ್ದಾನೆ. ಕಾಕತಿ ಗ್ರಾಮದ ಸಿದ್ರಾಯಿ ಸುತಗಟ್ಟಿ(65) ಕೊಚ್ಚಿ ಹೋದ ವ್ಯಕ್ತಿ. ಈತನಿಗಾಗಿ ಎಸ್ ಡಿ ಆರ್ ಎಫ್ತಂ ಡದಿಂದ ಇಂದು ಶೋಧ ಕಾರ್ಯ ನಡೆಯುತ್ತಿದೆ. ಬೆಳಗಾವಿ ಬಳಿಯ ನಾಲಾ ಉಕ್ಕಿ ಹರಿದು ಬೆಳೆ ಮುಳುಗಡೆಯಾಗಿದೆ. ಸಾವಿರಾರು ಎಕರೆ ಪ್ರದೇಶದಲ್ಲಿ ಬೆಳೆ ಮುಳುಗಡೆಯಾಗಿದೆ. ಘಟಪ್ರಭಾ, ಮಲಪ್ರಭಾ ಜಲಾಶಯಕ್ಕೆ ಒಳ ಹರಿವು ಹೆಚ್ಚಳವಾಗಿದೆ.
ಉತ್ತರ ಕರ್ನಾಟಕದ ಬಾಗಲಕೋಟೆ ಜಿಲ್ಲೆಯಲ್ಲೂ ಮಳೆಯ ಆರ್ಭಟ ಹೆಚ್ಚಾಗಿದೆ. ಈ ವರ್ಷ ಕೂಡ ಪ್ರವಾಹ ಭೀತಿ ಎದುರಾಗಿದೆ. ಘಟಪ್ರಬಾ ನದಿಯು ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ಮುಧೋಳ್, ಬನಹಟ್ಟಿ ತಾಲೂಕುಗಳು ಪ್ರವಾಹ ಭೀತಿ ಎದುರಿಸುತ್ತಿವೆ.
ಮಹಾರಾಷ್ಟ್ರದ ಘಟ್ಟ ಪ್ರದೇಶ ಹಾಗೂ ಬೆಳಗಾವಿ ಜಿಲ್ಲೆಯಾದ್ಯಂತ ಮಳೆಯ ಆರ್ಭಟ ಮುಂದುವರೆದಿದೆ. ವರುಣನ ಅಬ್ಬರಕ್ಕೆ ನದಿಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಮಳೆಯ ಅಬ್ಬರದಿಂದ ಚಿಕ್ಕೋಡಿ ವಿಭಾಗದ ಒಟ್ಟು 7 ಕೆಳ ಹಂತದ ಸಂಪರ್ಕ ಸೇತುವೆಗಳು ಜಲಾವೃತವಾಗಿವೆ. ಕಲ್ಲೋಳ ಗ್ರಾಮದ ದತ್ತ ದೇವಸ್ಥಾನ ಹಾಗೂ ಕಾರದಗಾ ಗ್ರಾಮದ ಬಂಗಾಲಿ ಬಾಬಾ ದೇವಸ್ಥಾನಗಳಿಗೆ ಮಳೆ ನೀರು ನುಗ್ಗಿದೆ. ಬೆಳಗಾವಿ ಜಿಲ್ಲೆಯ ನಿಪ್ಪಾಣಿ, ಚಿಕ್ಕೋಡಿ ಹಾಗೂ ಹುಕ್ಕೇರಿ ತಾಲೂಕಿನ ಗ್ರಾಮಗಳಲ್ಲಿ ಪ್ರವಾಹ ಭೀತಿ ಎದುರಾಗಿದೆ.