ಮುಖ್ಯಮಂತ್ರಿ ಪ್ರವಾಸ ಹಿನ್ನೆಲೆ: ಡಿ.ಸಿ. ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ
ಕಲಬುರಗಿ,ಜು.09(ಕ.ವಾ)- ರಾಜ್ಯದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶನಿವಾರ ಕಲಬುರಗಿ ಜಿಲ್ಲೆಯಲ್ಲಿ ನೂರಾರು ಕೋಟಿ ರೂ. ಗಳ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಚಾಲನೆ ನೀಡಲು ಪ್ರವಾಸ ಕೈಗೊಳ್ಳುತ್ತಿದ್ದು, ಸಂಬಂಧಿಸಿದ ಇಲಾಖೆಯ ಅಧಿಕಾರಿಗಳು ಶಿಷ್ಟಾಚಾರದಂತೆ ತಮಗೆ ವಹಿಸಿದ ಜವಾಬ್ದಾರಿಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಡಿ.ಸಿ.ವಿ.ವಿ.ಜ್ಯೋತ್ಸ್ನಾ ಅವರು ಅಧಿಕಾರಿಗಳಿಗೆ ಸೂಚಿಸಿದರು.
ಮುಖ್ಯಮಂತ್ರಿಗಳ ಪ್ರವಾಸ ಹಿನ್ನೆಲೆಯಲ್ಲಿ ಶುಕ್ರವಾರ ನಗರದ ಡಿ.ಸಿ. ಕಚೇರಿಯ ಸಭಾಂಗಣದಲ್ಲಿ ಪೂರ್ವಭಾವಿ ಸಿದ್ಧತಾ ಸಭೆಯಲ್ಲಿ ಅವರು ಮಾತನಾಡಿದರು.
ಜಿಲ್ಲೆಯ ಎಲ್ಲಾ ಇಲಾಖೆಯ ಅಧಿಕಾರಿಗಳು ಸಮನ್ವಯತೆ ಕಾಪಾಡಿಕೊಂಡು ಮುಖ್ಯಮಂತ್ರಿಗಳ ಪ್ರವಾಸ ಕಾರ್ಯಕ್ರಮಗಳನ್ನು ಯಶಸ್ವಿಗೊಳಿಸಲು ಶ್ರಮಿಸಬೇಕೆಂದು ಸೂಚಿಸಿದರು.
ಕೋವಿಡ್-19 ಕಾರಣ ಮುಖ್ಯಮಂತ್ರಿಗಳು ಭಾಗವಹಿಸುವ ಕಾರ್ಯಕ್ರಮದಲ್ಲಿ ಹೆಚ್ಚಿನ ಜನಸಂದಣಿ ಆಗದಂತೆ ಮತ್ತು ಅವರು ಸಂಚರಿಸುವ ಮಾರ್ಗ ಮಧ್ಯೆ ಸೂಕ್ತ ಪೊಲೀಸ್ ಬಂದೋಬಸ್ತ್ ಮಾಡಬೇಕು ಎಂದು ಅಪರಾಧ ಮತ್ತು ಸಂಚಾರಿ ವಿಭಾಗದ ಡಿ.ಸಿ.ಪಿ. ಶ್ರೀಕಾಂತ ಬಿ. ಕಟ್ಟಿಮನಿ ಅವರಿಗೆ ಸೂಚಿಸಿದ ಜಿಲ್ಲಾಧಿಕಾರಿಗಳು ಕಾರ್ಯಕ್ರಮ ಸಂಘಟನೆಯ ಜವಾಬ್ದಾರಿ ವಹಿಸಿಕೊಂಡಿರುವ ಆಯೋಜಕ ಇಲಾಖೆಯ ಅಧಿಕಾರಿಗಳು ಕೋವಿಡ್ ಮಾರ್ಗಸೂಚಿ ಪಾಲನೆ ಮತ್ತು ಕಾರ್ಯಕ್ರಮದ ಶಿಷ್ಟಚಾರ ಉಲ್ಲಂಘನೆಯಾಗದಂತೆ ಎಚ್ಚರ ವಹಿಸಬೇಕು ಎಂದರು.
ಸಭೆಯಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸಿಮಿ ಮರಿಯಮ್ ಜಾರ್ಜ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ದಿಲೀಷ್ ಶಶಿ, ಮಹಾನಗರ ಪಾಲಿಕೆ ಆಯುಕ್ತ ಸ್ನೇಹಲ್ ಸುಧಾಕರ್ ಲೋಖಂಡೆ, ಡಿಸಿಪಿ (ಅಪರಾಧ ಮತ್ತು ಸಂಚಾರ) ಶ್ರೀಕಾಂತ್ ಬಿ.ಕಟ್ಟಿಮನಿ, ಹೆಚ್ಚುವರಿ ಜಿಲ್ಲಾಧಿಕಾರಿ ಡಾ.ಶಂಕರ ವಣಿಕ್ಯಾಳ, ನಗರಾಭಿವೃದ್ಧಿ ಪ್ರಾಧಿಕಾರದ ಆಯುಕ್ತ ರಾಚಪ್ಪಾ, ಲೋಕೋಪಯೋಗಿ ಇಲಾಖೆಯ ಕಾರ್ಯನಿರ್ವಾಹಕ ಅಭಿಯಂತ ಮಲ್ಲಿಕಾರ್ಜುನ ಜೇರಟಗಿ, ಡಿ.ಹೆಚ್.ಓ ಡಾ.ಶರಣಬಸಪ್ಪ ಗಣಜಲಖೇಡ್, ಕಲಬುರಗಿ-ಯಾದಗಿರಿ ಡಿ.ಸಿ.ಸಿ ಬ್ಯಾಂಕಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಚಿದಾನಂದ ಸಿ. ನಿಂಬಾಳ ಸೇರಿದಂತೆ ಇನ್ನಿತರ ಜಿಲ್ಲಾ ಮಟ್ಟದ ಅಧಿಕಾರಿಗಳು ಇದ್ದರು.