Karnataka Weather Today: ಇಂದು ನಾಳೆ ರಾಜ್ಯದಲ್ಲಿ ಮಳೆಯ ಆರ್ಭಟ; ಈ ಜಿಲ್ಲೆಗಳಲ್ಲಿ ಆರೆಂಜ್-ಯೆಲ್ಲೋ ಅಲರ್ಟ್ ಘೋಷಣೆ
Karnataka Rain Updates: ಬೆಂಗಳೂರು(ಜು.22): ಪೂರ್ವ ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ರಾಜ್ಯದಲ್ಲಿ ಮಳೆಯ ಅಬ್ಬರ ಜೋರಾಗಿದೆ. ಕಳೆದ ಕೆಲ ದಿನಗಳಿಂದ ಎಡೆಬಿಡದೆ ಸುರಿಯುತ್ತಿರುವ ಮಳೆಗೆ ಜನರು ತತ್ತರಿಸಿ ಹೋಗಿದ್ದಾರೆ. ಮಲೆನಾಡು, ಕರಾವಳಿ, ಉತ್ತರ ಒಳನಾಡು ಮತ್ತು ದಕ್ಷಿನ ಒಳನಾಡಿನಲ್ಲಿ ಭಾರೀ ಮಳೆಯಾಗುತ್ತಿದೆ. ಸಿಲಿಕಾನ್ ಸಿಟಿ ಬೆಂಗಳೂರಿನಲ್ಲೂ ಸಹ ಕಳೆದೊಂದು ವಾರದಿಂದ ನಿರಂತರವಾಗಿ ಮಳೆ ಸುರಿಯುತ್ತಿದೆ. ಜಿಟಿ-ಜಿಟಿ ಮಳೆಗೆ ವಾಹನ ಸವಾರರು ಪರದಾಡುವಂತಾಗಿದೆ. ನಿನ್ನೆ-ಮೊನ್ನೆ ರಾಜ್ಯದ ಮಲೆನಾಡು ಮತ್ತು ಕರಾವಳಿ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗಿದೆ. ರಾಜ್ಯದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲೂ ನಿರಂತರ ಮಳೆಯಾಗಿದೆ. ಜುಲೈ 23ರ ತನಕವೂ ಇದೇ ವಾತಾವರಣ ಮುಂದುವರೆಯುವ ಸಾಧ್ಯತೆ ಇದೆ. ಮಂಗಳವಾರ ಮುಖ್ಯವಾಗಿ ಶಿವಮೊಗ್ಗ ಜಿಲ್ಲೆಯ ಹೊಸನಗರದಲ್ಲಿ ಅತೀ ಹೆಚ್ಚು ಅಂದರೆ 12 ಸೆಂ.ಮೀ ಮಳೆಯಾಗಿದ್ದು, ಚಿಕ್ಕಮಗಳೂರು ಜಿಲ್ಲೆಯ ಕೊಟ್ಟಿಗೆಹಾರದಲ್ಲಿ 6 ಸೆಂ.ಮೀ, ದಕ್ಷಿಣ ಕನ್ನಡ ಜಿಲ್ಲೆಯ ಸುಬ್ರಮಣ್ಯದಲ್ಲಿ 7 ಸೆಂ.ಮೀ ಮಳೆಯಾಗಿದೆ.
ಪೂರ್ವ ಅರಬ್ಬಿ ಸಮುದ್ರದ ಮಹಾರಾಷ್ಟ್ರ ಮತ್ತು ಕರ್ನಾಟಕದ ಪ್ರದೇಶಗಳಲ್ಲಿ ಕಡಿಮೆ ಒತ್ತಡವಿರುವ ಪ್ರದೇಶ ವಿಸ್ತರಿಸಿದೆ. ಇದರಿಂದಾಗಿ ಜುಲೈ 23ರ ವೇಳೆಗೆ ವಾಯುಭಾರ ಕುಸಿತ ಆಗುವ ಸಾಧ್ಯತೆ ಇದೆ. ಇದರ ಪರಿಣಾಮವಾಗಿ ಜುಲೈ 24ರವರಗೆ ವ್ಯಾಪಕ ಮಳೆಯಾಗುವ ಸಂಭವವಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ ಎಸ್ ಪಾಟೀಲ್ ನ್ಯೂಸ್ 18 ಕನ್ನಡಕ್ಕೆ ತಿಳಿಸಿದ್ದಾರೆ.
ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು ಸೇರಿದಂತೆ ರಾಜ್ಯದ ವಿವಿಧೆಡೆ ನಿರಂತರವಾಗಿ ಮಳೆ ಸುರಿಯುತ್ತಿದೆ. ಹೀಗಾಗಿ ಆಯಾ ಪ್ರದೇಶಕ್ಕನುಗುಣವಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಇತ್ತ ರಾಜ್ಯ ರಾಜಧಾನಿ ಬೆಂಗಳೂರಿನಲ್ಲೂ ಮಳೆಯ ವಾತಾವರಣವಿದ್ದು ನಿತ್ಯವೂ ಸುರಿವ ಮಳೆಯಿಂದಾಗಿ ವಾಹನ ಸವಾರರು ಪರದಾಡುವಂತಾಗಿದೆ.
ಕರ್ನಾಟಕದಲ್ಲಿ ಇನ್ನೂ ಎರಡು ಮೂರು ದಿನ ಉತ್ತಮ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಹೀಗಾಗಿ ಜುಲೈ 23 ಅಥವಾ 24ರ ತನಕವೂ ಮಳೆಯ ವಾತಾವರಣ ಮುಂದುವರೆಯಲಿದೆ. ರಾಜ್ಯದ ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ, ಮಂಗಳೂರು ಹಾಗೂ ಮಲೆನಾಡು ಜಿಲ್ಲೆಗಳಾದ ಚಿಕ್ಕಮಗಳೂರು, ಶಿವಮೊಗ್ಗ, ಕೊಡಗಿನಲ್ಲಿ ಮಳೆಯ ಆರ್ಭಟ ಸದ್ಯಕ್ಕೆ ನಿಲ್ಲುವುದು ಅನುಮಾನ ಎನ್ನಲಾಗಿದೆ.
ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಜುಲೈ 22 ಮತ್ತು 23ರಂದು ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆ ಇರುವುದರಿಂದ ಈ ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಇತ್ತ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಹಾಗೂ ಕೊಡಗು ಜಿಲ್ಲೆಗಳಲ್ಲಿ ಇಂದು ಅಧಿಕ ಪ್ರಮಾಣದ ಮಳೆಯಾಗಲಿದೆ. ಇಂದು ಈ ಭಾಗಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದ್ದು, ನಾಳೆ ಅಂದರೆ ಜುಲೈ 23ರಂದು ಮಳೆ ಹೆಚ್ಚಾಗುವ ಸಂಭವ ಇರುವುದರಿಂದ ಆರೆಂಜ್ ಅಲರ್ಟ್ ಘೋಷಿಸಲಾಗಿದೆ.
ಬೆಳಗಾವಿ, ಧಾರವಾಡ, ಹಾವೇರಿ, ಬೀದರ್, ಕಲಬುರ್ಗಿ, ಗದಗ ಮತ್ತು ಯಾದಗಿರಿ ಜಿಲ್ಲೆಗಳಲ್ಲೂ ವ್ಯಾಪಕ ಮಳೆಯಾಗಲಿದ್ದು, ಇಂದು-ನಾಳೆ ಅಂದರೆ ಜುಲೈ 22 ಮತ್ತು 23ರಂದು ಯೆಲ್ಲೋ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ದಾವಣಗೆರೆ, ಚಿತ್ರದುರ್ಗ, ರಾಮನಗರ ಮತ್ತು ತುಮಕೂರು ಜಿಲ್ಲೆಗಳಲ್ಲಿ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.
ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಜಿಟಿ ಜಿಟಿ ಮಳೆಯಾಗುತ್ತಿತ್ತು. ನಿನ್ನೆಯಿಂದ ಮತ್ತೆ ಮಳೆರಾಯನ ಆರ್ಭಟ ಶುರುವಾಗಿದೆ. ಮುಂದಿನ ಎರಡು ದಿನಗಳ ಕಾಲ ರಾಜಧಾನಿ ಬೆಂಗಳೂರಿನಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.