ಕಲಬುರಗಿ : ಮುಖ್ಯಮಂತ್ರಿ ಬದಲಾವಣೆ ಅಧಿಕೃತ ಸೂಚನೆ ಬಂದಿಲ್ಲ: ಸಂಸದ ಡಾ. ಜಾಧವ್
ಕಲಬುರಗಿ :ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಬದಲಾವಣೆಯ ಕುರಿತು ಇಲ್ಲಿಯವರೆಗೂ ಪಕ್ಷದ ವರಿಷ್ಠರಿಂದ ಯಾವುದೇ ಸೂಚನೆ ಬಂದಿಲ್ಲ ಎಂದು ಸಂಸದ ಡಾ. ಉಮೇಶ್ ಜಾಧವ್ ಅವರು ಹೇಳಿದರು.
ರಾಜ್ಯದ ಗಣಿ ಮತ್ತು ಭೂ ವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ಅವರು ಶನಿವಾರ ನಡೆಸಿದ ಸುದ್ದಿಗೋಷ್ಠಿಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರೇ ನಮ್ಮ ನಾಯಕರು. ಅವರ ಜೊತೆ ನಾವಿರುತ್ತೇವೆ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹಾಗೂ ಪ್ರಧಾನಿ ನರೇಂದ್ರ ಮೋದಿ ಅವರ ಕಾರ್ಯವೈಖರಿ ನೋಡಿ ಕಾಂಗ್ರೆಸ್ ತೊರೆದು ನಾನು ಬಿಜೆಪಿಗೆ ಬಂದಿದ್ದೇನೆ. ನಮಗೆ ಬಿ.ಎಸ್. ಯಡಿಯೂರಪ್ಪ ಅವರ ಜೊತೆಗೆ ಪಕ್ಷವೂ ಅಷ್ಟೇ ಮುಖ್ಯ. ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಕ್ಕೆ ನಾನು ಬದ್ಧವಾಗಿರುತ್ತೇನೆ ಎಂದು ಅವರು ಸ್ಪಷ್ಟಪಡಿಸಿದರು.
ಸದ್ಯದ ರಾಜಕೀಯ ಬೆಳವಣಿಗೆಯಿಂದ ಯಾರೂ ಆತಂಕಕ್ಕೆ ಒಳಗಾಗಬಾರದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ನಮಗೆ ಧೈರ್ಯ ಹೇಳಿದ್ದಾರೆ. ಬಿಜೆಪಿ ಅತೀ ದೊಡ್ಡ ಪಕ್ಷವಾಗಿದ್ದು, ಪಕ್ಷದ ವರಿಷ್ಠರು ಕೈಗೊಳ್ಳುವ ನಿರ್ಧಾರಗಳನ್ನು ನಾವು ಪಾಲಿಸಬೇಕಾಗಿದೆ ಎಂದು ಅವರು ಹೇಳಿದರು.