ಮಳೆಗೆ ಕೇರಳ ತತ್ತರ: ಮುಖ್ಯಮಂತ್ರಿ ವಿಜಯನ್ ಜೊತೆ ಪ್ರಧಾನಿ ನರೇಂದ್ರ ಮೋದಿ ಮಾತುಕತೆ
ನವದೆಹಲಿ: ಕೇರಳದ ಮುಖ್ಯಮಂತ್ರಿ ಪಿಣರಾಯ್ ವಿಜಯನ್ ಜೊತೆಗೆ ಪ್ರಧಾನಿ ನರೇಂದ್ರ ಮೋದಿ ಭಾನುವಾರ ಮಾತುಕತೆ ನಡೆಸಿದ್ದು, ಭಾರೀ ಮಳೆ ಹಾಗೂ ಭೂ ಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಿದ್ದಾರೆ.
ಮಧ್ಯ ಕೇರಳದ ಎರಡು ಜಿಲ್ಲೆಗಳ ಗುಡ್ಡಗಾಡು ಪ್ರದೇಶದಲ್ಲಿ ಪ್ರವಾಹ ಹಾಗೂ ಕುಸಿತದಿಂದ ಮೃತಪಟ್ಟಿರುವವರ ಸಂಖ್ಯೆ 19ಕ್ಕೆ ಏರಿಕೆಯಾಗಿದ್ದು, ಭಾನುವಾರ ಅವಶೇಷಗಳಡಿ ಸಿಲುಕಿದ್ದ ಹಲವು ಮೃತದೇಹಗಳನ್ನು ರಕ್ಷಣಾ ಸಿಬ್ಬಂದಿ ಹೊರಗೆ ತಂದಿದ್ದಾರೆ.
ಈ ಕುರಿತಂತೆ ಟ್ವೀಟ್ ಮಾಡಿರುವ ಪ್ರಧಾನಿ ನರೇಂದ್ರ ಮೋದಿ, ಕೇರಳ ಮುಖ್ಯಮಂತ್ರಿ ವಿಜಯನ್ ಪಿಣರಾಯ್ ಜೊತೆಗೆ ಮಾತುಕತೆ ನಡೆಸಲಾಗಿದ್ದು, ಕೇರಳದಲ್ಲಿನ ಭಾರೀ ಮಳೆ ಮತ್ತು ಭೂಕುಸಿತದಿಂದ ಉಂಟಾಗಿರುವ ಪರಿಸ್ಥಿತಿ ಕುರಿತಂತೆ ಚರ್ಚೆ ನಡೆಸಲಾಗಿದೆ. ರಕ್ಷಣಾ ಸಿಬ್ಬಂದಿಗಳು ಕಾರ್ಯಾಚರಣೆಯಲ್ಲಿ ನಿರತರಾಗಿದ್ದು, ಪ್ರವಾಹ ಪೀಡಿತ ಹಾಗೂ ಗಾಯಾಳುಗಳಿಗೆ ಅಗತ್ಯ ನೆರವು ನೀಡುತ್ತಿದ್ದಾರೆ. ಪ್ರತಿಯೊಬ್ಬರು ಸುರಕ್ಷತೆ ಹಾಗೂ ಚೆನ್ನಾಗಿರುವಂತೆ ಪ್ರಾರ್ಥಿಸುವುದಾಗಿ ಹೇಳಿದ್ದಾರೆ.
ಮತ್ತೊಂದು ಟ್ವೀಟ್ ನಲ್ಲಿ ಕೇರಳದಲ್ಲಿನ ಭಾರೀ ಮಳೆ ಮತ್ತು ಭೂಕುಸಿತದಿಂದ ಕೆಲವರು ಮೃತಪಟ್ಟಿರುವುದಕ್ಕೆ ನೋವು ವ್ಯಕ್ತಪಡಿಸಿದ್ದು, ಸಂತ್ರಸ್ತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.