ಹಿಂಗಾರು ಅಬ್ಬರ: ರಾಜ್ಯದಲ್ಲಿ ನಾಲ್ಕು ದಿನ ಭಾರಿ ಮಳೆ ಸಂಭವ!
ಹೈಲೈಟ್ಸ್:
- ರಾಜ್ಯದಲ್ಲಿ ಹಿಂಗಾರು ಮಳೆ ಆರ್ಭಟ, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ
- ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ
- ನ.1ರಿಂದ ನ.4ರವರೆಗೆ ಯೆಲ್ಲೊ ಅಲರ್ಟ್; ಹವಾಮಾನ ಇಲಾಖೆ ಎಚ್ಚರಿಕೆ
ಬೆಂಗಳೂರು: ರಾಜ್ಯದಲ್ಲಿ ಹಿಂಗಾರು ಮಳೆ ಕೂಡ ಆರ್ಭಟ ಮಾಡುತ್ತಿದ್ದು, ಮುಂದಿನ ನಾಲ್ಕು ದಿನ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಕರಾವಳಿ, ಮಲೆನಾಡು, ದಕ್ಷಿಣ ಒಳನಾಡು ಹಾಗೂ ಉತ್ತರ ಒಳನಾಡಿನ ಕೆಲವು ಕಡೆ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದ್ದು ಯೆಲ್ಲೊಅಲರ್ಟ್ ನೀಡಲಾಗಿದೆ. ಕರಾವಳಿ ಜಿಲ್ಲೆಗಳ ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿಯಲ್ಲಿ ಗುಡುಗು ಸಿಡಿಲಿನಿಂದ ಕೂಡಿದ ಭಾರಿ ಮಳೆಯಾಗುವ ಸಾಧ್ಯತೆ ಇದೆ.
ನ.3 ಮತ್ತು ನ.5ರಂದು ಯೆಲ್ಲೊಅಲರ್ಟ್ ಹಾಗೂ ನ.4ರಂದು ಆರೆಂಜ್ ಅಲರ್ಟ್ ನೀಡಲಾಗಿದೆ. ದಕ್ಷಿಣ ಒಳನಾಡಿನ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಲ್ಲೆಗಳಿಗೆ ನ.1ರಿಂದ ನ.4ರವರೆಗೆ ಯೆಲ್ಲೊ ಅಲರ್ಟ್ ನೀಡಲಾಗಿದೆ.
ನವೆಂಬರ್ 4ರಂದು ಮಲೆನಾಡಿನ ಜಿಲ್ಲೆಗಳ ಜತೆಗೆ ದಕ್ಷಿಣ ಒಳನಾಡಿನ ಚಾಮರಾಜನಗರ, ಬೆಂಗಳೂರು ನಗರ ಮತ್ತು ಗ್ರಾಮಾಂತರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಮಂಡ್ಯ, ಚಿಕ್ಕಬಳ್ಳಾಪುರ, ಮೈಸೂರು, ರಾಮನಗರ ಜಿಲ್ಲೆಗಳಿಗೂ ಯೆಲ್ಲೊಅಲರ್ಟ್ ನೀಡಲಾಗಿದೆ.
ಉತ್ತರ ಒಳನಾಡಿನ ಬೀದರ್, ಕಲಬುರಗಿ, ಯಾದಗಿರಿ, ಗದಗ, ಹಾವೇರಿ, ಧಾರವಾಡ, ಬೆಳಗಾವಿ, ಕೊಪ್ಪಳ, ಬಾಗಲಕೋಟ, ವಿಜಯಪುರ, ರಾಯಚೂರು ಜಿಲ್ಲೆಗಳಲ್ಲಿ ನ.1 ಮತ್ತು ನ.2ರಂದು ಒಣಹವೆ ಮುಂದುವರಿಯಲಿದ್ದು, ನ.3ರಿಂದ ನ.5ರವರೆಗೆ ಗುಡುಗು ಸಿಡಿಲು ಸಹಿತ ಮಳೆ, ಕೆಲವೆಡೆ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.