ನಾಯಕತ್ವ ಬದಲಾವಣೆ ಬಗ್ಗೆ ಮಹತ್ವದ ಮಾಹಿತಿ ಬಿಚ್ಚಿಟ್ಟ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್!

* ಸಿಎಂ, ಕಟೀಲ್‌ ಇಬ್ಬರೂ ಚೆನ್ನಾಗಿ ಕೆಲಸ ಮಾಡುತ್ತಿದ್ದಾರೆ

*  ನಾಯಕತ್ವ ಬದಲಾವಣೆ ಇಲ್ಲ: ಅರುಣ್‌ ಸಿಂಗ್‌

* ಇವೆಲ್ಲ ಕಾಂಗ್ರೆಸ್‌ ಹಬ್ಬಿಸಿದ ವದಂತಿ: ಬಿಜೆಪಿ ಉಸ್ತುವಾರಿ

* ಕಾಂಗ್ರೆಸ್‌ ಬಳಿ ಯಾವುದೇ ವಿಷಯಗಳು ಇಲ್ಲ

ಬೆಂಗಳೂರು(ಮನ.09): ರಾಜ್ಯದಲ್ಲಿ ನಾಯಕತ್ವ ಹಾಗೂ ಪಕ್ಷದ ರಾಜ್ಯಾಧ್ಯಕ್ಷರ ಬದಲಾವಣೆ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿರುವ ಬಿಜೆಪಿ ರಾಜ್ಯ ಉಸ್ತುವಾರಿ ಅರುಣ್‌ ಸಿಂಗ್‌ (BJP National Secretary Arun Singh), ಪ್ರತಿಪಕ್ಷ ಕಾಂಗ್ರೆಸ್‌ ಈ ಬಗ್ಗೆ ಸುಳ್ಳು ಸುದ್ದಿ ಹಬ್ಬಿಸುತ್ತಿದೆ ಎಂದು ಆಪಾದಿಸಿದ್ದಾರೆ.

ಸೋಮವಾರ ಸಂಜೆ ಬೆಂಗಳೂರಿಗೆ ಆಗಮಿಸಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿ, ಕಾಂಗ್ರೆಸ್‌ (Congress) ಬಳಿ ಯಾವುದೇ ವಿಷಯಗಳಿಲ್ಲದ ಕಾರಣ ಅದು ಬಿಜೆಪಿ ಬಗ್ಗೆ ಸುಳ್ಳು ಆರೋಪ- ಆಧಾರರಹಿತ ಟೀಕೆ ಮಾಡುತ್ತಿದೆ. ಪಕ್ಷದ ರಾಜ್ಯಾಧ್ಯಕ್ಷ ನಳಿನ್‌ಕುಮಾರ್‌ ಕಟೀಲ್‌ ಅವರು ಉತ್ತಮವಾಗಿ ಕೆಲಸ ಮಾಡುತ್ತಿದ್ದಾರೆ ಎಂದು ಪ್ರಶಂಸಿಸಿದರು. ಅಲ್ಲದೆ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Chief Minister Basavaraj Bommai) ಕಾರ್ಯಚಟುವಟಿಕೆಯನ್ನೂ ಶ್ಲಾಘಿಸಿದರು.

ಬಿಟ್‌ ಕಾಯಿನ್‌ ಹಗರಣದಲ್ಲಿ (Bitcoin Scam) ಬಿಜೆಪಿ ನಾಯಕರು ಭಾಗಿಯಾಗಿದ್ದಾರೆ ಎಂಬ ಕಾಂಗ್ರೆಸ್‌ ಆರೋಪ ಕುರಿತ ಪ್ರಶ್ನೆಗೆ ಉತ್ತರಿಸಿದ ಸಿಂಗ್‌, ಆ ಕುರಿತು ನಮ್ಮ ಮುಖ್ಯಮಂತ್ರಿಗಳು ತಕ್ಷಣ ಕ್ರಮ ಕೈಗೊಂಡಿದ್ದಾರೆ. ಕಾಂಗ್ರೆಸ್‌ ನಾಯಕರು ಆಧಾರರಹಿತವಾಗಿ ಆರೋಪಗಳನ್ನು ಮಾಡುತ್ತಿದ್ದಾರೆ. ಯಾವುದೇ ಹುರುಳಿಲ್ಲ ಎಂದು ಕಡ್ಡಿ ಮುರಿದಂತೆ ಹೇಳಿದರು.

ಕಾಂಗ್ರೆಸ್‌ ಪಕ್ಷವು ಒಡೆದ ಮನೆಯಾಗಿದೆ. ಸಿದ್ದರಾಮಯ್ಯ (Siddaramaiah) ಮತ್ತು ಡಿ.ಕೆ.ಶಿವಕುಮಾರ್‌ (DK Shivakumar) ಅವರ ನಡುವೆ ತೀವ್ರ ಭಿನ್ನಾಭಿಪ್ರಾಯವಿದೆ. ಆ ಪಕ್ಷಕ್ಕೆ ಹೋರಾಟ ಮಾಡಲು ವಿಷಯಗಳೇ ಇಲ್ಲದಂತಾಗಿದೆ. ಕಾಂಗ್ರೆಸ್‌ ಒಳಜಗಳ ಕೇವಲ ಕರ್ನಾಟಕದಲ್ಲಷ್ಟೇ (karnataka) ಇಲ್ಲ. ಛತ್ತೀಸ್‌ಗಢ, ಪಂಜಾಬ್‌ ರಾಜ್ಯಗಳಲ್ಲೂ ಇದೆ. ಕಾಂಗ್ರೆಸ್‌ ನಾಯಕತ್ವದ ವೈಫಲ್ಯವೇ ಇದಕ್ಕೆ ಕಾರಣ ಎಂದು ಹರಿಹಾಯ್ದರು.

ಇತ್ತೀಚೆಗೆ ನಡೆದ ಸಿಂದಗಿ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಭರ್ಜರಿ ಮತಗಳ ಅಂತರದಿಂದ ಬಿಜೆಪಿ ಗೆಲುವು ಸಾಧಿಸಿದೆ. ಹಾನಗಲ್‌ ವಿಧಾನಸಭಾ ಕ್ಷೇತ್ರದಲ್ಲಿ ಕಡಮೆ ಮತಗಳ ಅಂತರದಿಂದ ಸೋಲು ಉಂಟಾಗಿದೆ. ಅಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಹಲವರು ಚೆನ್ನಾಗಿ ಕೆಲಸ ಮಾಡಿದ್ದಾರೆ ಎಂದು ಸ್ಪಷ್ಟಪಡಿಸಿದರು.

‘ಪೆಟ್ರೋಲ್‌ ಮತ್ತು ಡೀಸೆಲ್‌ ಮೇಲಿನ ಬೆಲೆಯನ್ನು ನಮ್ಮ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಕಡಮೆ ಮಾಡಿವೆ. ಇದಕ್ಕಾಗಿ ನಾನು ಪ್ರಧಾನಿ ನರೇಂದ್ರ ಮೋದಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಅಭಿನಂದಿಸುತ್ತೇನೆ. ಮುಂಬರುವ 2023ರ ಸಾರ್ವತ್ರಿಕ ವಿಧಾನಸಭಾ ಚುನಾವಣೆಯಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ’ ಎಂದು ಅರುಣ್‌ ಸಿಂಗ್‌ ವಿಶ್ವಾಸ ವ್ಯಕ್ತಪಡಿಸಿದರು.

ಇತ್ತೀಚೆಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ರಾಮಲಿಂಗಾರೆಡ್ಡಿ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಬಿಟ್‌ ಕಾಯಿನ್‌ ಹಗರಣದ ಬಗ್ಗೆ ನಿಷ್ಪಕ್ಷಪಾತವಾಗಿ ತನಿಖೆ ನಡೆದರೆ ರಾಜ್ಯ ಸರ್ಕಾರಕ್ಕೆ ಕಂಟಕ ಎದುರಾಗಲಿದೆ ಎಂದು ಹೇಳಿದ್ದರು.

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *