ಬೆಳೆ ನಷ್ಟ ಸಮೀಕ್ಷೆ ನಡೆಸಿ, ಪರಿಹಾರ ಪಾವತಿಸಿ: ಸರ್ಕಾರಕ್ಕೆ ಸಿದ್ದರಾಮಯ್ಯ ಒತ್ತಾಯ

ಬೆಂಗಳೂರು: ಕಳೆದ ತಿಂಗಳಿನಿಂದ ಸುರಿಯುತ್ತಿರುವ ಮಳೆಯಿಂದ ರಾಜ್ಯದಲ್ಲಿ ಭಾರೀ ಪ್ರಮಾಣದ ಬೆಳೆ ನಷ್ಟವಾಗಿದ್ದು, ಕೂಡಲೇ ಈ ಕುರಿತುಸಮೀಕ್ಷೆ ನಡೆಸಿ, ನಷ್ಟಕ್ಕೊಳಗಾದ ರೈತರಿಗೆ ಪರಿಹಾರ ನೀಡಬೇಕೆಂದು ಎಂದು ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಆಗ್ರಹಿಸಿದ್ದಾರೆ.

ಈ ಕುರಿತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವ ಅವರು, ರಾಜ್ಯದಲ್ಲಿ ವಾಡಿಕೆಯಂತೆ 69.79 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆಯಾಗುತ್ತದೆ. ಆದರೆ ಕೊರೋನ ನಂತರ ಹೆಚ್ಚಿನ ಜನರು ಕೃಷಿ ಕೆಲಸಗಳಲ್ಲಿ ತೊಡಗಿಕೊಂಡಿದ್ದಾರೆ. ಅದರಿಂದಾಗಿ ಕಳೆದ ವರ್ಷ ಮುಂಗಾರಿನಲ್ಲಿ ವಾಡಿಕೆಗಿಂತ ಸುಮಾರು 8 ಲಕ್ಷಕ್ಕೂ ಹೆಚ್ಚು ಹೆಕ್ಟೇರ್ ಪ್ರದೇಶದಲ್ಲಿ ಬಿತ್ತನೆ ಮಾಡಲಾಗಿದ್ದು ಒಟ್ಟು, 77.65 ಲಕ್ಷ ಹೆಕ್ಟೇರ್ ಪ್ರದೇಶದಲ್ಲಿ ಕೃಷಿ ನಡೆದಿತ್ತು.

 

ಈ ವರ್ಷ ಇನ್ನಷ್ಟು ಕೃಷಿ ಹೆಚ್ಚಾಗಿದ್ದು, ಹಿಂದಿನ ವರ್ಷಕ್ಕಿಂತಲೂ 1.07 ಲಕ್ಷ ಹೆಕ್ಟೇರ್ ಹೆಚ್ಚು ಪ್ರದೇಶದಲ್ಲಿ ಬಿತ್ತನೆಯಾಗಿದೆ ಎಂದು ಹೇಳಿದ್ದಾರೆ. ರಾಗಿ, ಭತ್ತ, ಮುಸುಕಿನ ಜೋಳ, ತೊಗರಿ, ಹತ್ತಿ, ಮೆಣಸಿನ ಕಾಯಿ, ಶೇಂಗಾ, ಹೆಸರು, ಉದ್ದು ಮುಂತಾದ ಬೆಳೆಗಳು ಕೊಯಿಲಿಗೆ ಬಂದಿವೆ. ಸೆಪ್ಟೆಂಬರ್ ತಿಂಗಳಲ್ಲಿ ಶುರುವಾದ ಮಳೆ ಇನ್ನೂ ನಿಂತಿಲ್ಲ.

ಆರಂಭದಲ್ಲಿ ಬಿತ್ತನೆ ಮಾಡುವಾಗ ಜುಲೈ ಮತ್ತು ಆಗಸ್ಟ್ ತಿಂಗಳಲ್ಲಿ ಮಳೆ ಕೈಕೊಟ್ಟ ಕಾರಣ ದಕ್ಷಿಣ ಒಳನಾಡು ಸೇರಿದಂತೆ ಅನೇಕ ಜಿಲ್ಲೆಗಳಲ್ಲಿ ರೈತರು ಹಾಕಿದ ಬಿತ್ತನೆ ಬೀಜಗಳು ಸರಿಯಾಗಿ ಹುಟ್ಟಲಿಲ್ಲ, ಸರಿಯಾದ ಸಮಯಕ್ಕೆ ರಸಗೊಬ್ಬರ ಸಿಗಲಿಲ್ಲ. ಇಷ್ಟರ ನಡುವೆಯೂ ರೈತರು ಕಷ್ಟ ಪಟ್ಟು ಬೆಳೆಗಳನ್ನು ಬೆಳೆದಿದ್ದಾರೆ, ಆದರೆ ವ್ಯಾಪಕವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದ ರೈತಾಪಿ ಸಮುದಾಯ ಸಂಕಷ್ಟಕ್ಕೆ ಸಿಲುಕಿದೆ ಎಂದು ವಿವರಿಸಿದ್ದಾರೆ.

ಮಲೆನಾಡು, ಕರಾವಳಿ ಪ್ರದೇಶಗಳಲ್ಲಿ ಸುರಿಯುತ್ತಿರುವ ವ್ಯಾಪಕ ಮಳೆಯಿಂದಾಗಿ ಅಡಿಕೆ, ಕಾಫಿ, ಮೆಣಸು ಮುಂತಾದ ವಾಣಿಜ್ಯ ಬೆಳೆಗಳು ಹಲವು ರೀತಿಯ ಸಮಸ್ಯೆಗಳನ್ನು ಎದುರಿಸುತ್ತಿವೆ. ಕೊಳೆ ರೋಗದ ಜೊತೆಗೆ ಅಡಿಕೆಗೆ ಹಳದಿ ಎಲೆ ರೋಗ ಬಂದಿದೆ. ಮೆಣಸಿನ ಬಳ್ಳಿಗಳು ಕೊಳೆತು ಹೋಗುತ್ತಿವೆ.

ಕಾಫಿಯೂ ಕೊಳೆ ರೋಗದ ಸಮಸ್ಯೆಯನ್ನು ಎದುರಿಸುತ್ತಿದೆ. ಕೃಷಿ ಇಲಾಖೆಯ ಮಾಹಿತಿಯ ಪ್ರಕಾರ, ವ್ಯಾಪಕ ಮಳೆಯಿಂದಾಗಿ ಅಕ್ಟೋಬರ್ ಅಂತ್ಯದ ವೇಳೆಗೆ 11.22 ಲಕ್ಷ ಹೆಕ್ಟೇರ್‍ಗೂ ಹೆಚ್ಚು ಪ್ರದೇಶದಲ್ಲಿ ಬೆಳೆದ ಬೆಳೆ ನಷ್ಟವಾಗಿದೆ ಎಂದು ಹೇಳಿದ್ದಾರೆ.

ಸರ್ಕಾರ ಬೆಳೆ ನಷ್ಟದ ಬಗ್ಗೆ ಸ್ಪಷ್ಟವಾದ ಮಾಹಿತಿ ಕಲೆ ಹಾಕಿಲ್ಲ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬೆಂಗಳೂರು ಗ್ರಾಮಾಂತರ, ಬೆಂ. ನಗರ, ಕೋಲಾರ, ರಾಮನಗರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ಮೈಸೂರು, ಮಂಡ್ಯ, ಚಾಮರಾಜನಗರ ಮುಂತಾದ ಜಿಲ್ಲೆಗಳಲ್ಲಿ ಬೆಳೆದ ರಾಗಿ, ಭತ್ತ, ಮುಸುಕಿನ ಜೋಳದ ಬೆಳೆಗಳಿಗೆ ಆಗಿರುವ ನಷ್ಟದ ಕುರಿತು ಸಮೀಕ್ಷೆ ನಡೆಸಿಲ್ಲ. ಕಲ್ಯಾಣ ಕರ್ನಾಟಕ ಮತ್ತು ಕಿತ್ತೂರು ಕರ್ನಾಟಕದ ಜಿಲ್ಲೆಗಳಲ್ಲೂ ಬೆಳೆ ನಷ್ಟವಾಗಿದೆ. ಅತಿವೃಷ್ಠಿಯ ಹಾನಿ ಜೊತೆಗೆ ಅನಾವೃಷ್ಠಿಯಿಂದ ಅನೇಕ ಕಡೆ ಬರದ ಸಮಸ್ಯೆಯೂ ಇದೆ ಎಂದು ಮಾಹಿತಿ ನೀಡಿದ್ದಾರೆ.

ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಬೆಳೆ ನಷ್ಟಕ್ಕೆ ಸಮರ್ಪಕ ಪರಿಹಾರ ನೀಡುತ್ತಿಲ್ಲ, ಇದು ಅಮಾನವೀಯ. 2019-20, 2020-21 ರ ವರ್ಷಗಳಲ್ಲಿ ಸುಮಾರು 1.5 ರಿಂದ 2 ಲಕ್ಷ ಕೋಟಿ ರೂಗಳವರೆಗೆ ನಷ್ಟವಾಗಿತ್ತು. ಆದರೆ ಕೇಂದ್ರ ಸರ್ಕಾರ 2019-20 ರಲ್ಲಿ 1652.85, 2020-21 ರಲ್ಲಿ 1328.30 ಕೋಟಿಗಳನ್ನು ಮಾತ್ರ ಬಿಡುಗಡೆ ಮಾಡಿದೆ.

ಒಟ್ಟು ಬಿಡುಗಡೆ ಮಾಡಿರುವುದು ಕೇವಲ 2981.15 ಕೋಟಿ ರೂಗಳು ಮಾತ್ರ. 2021-22ರ ನಷ್ಟಕ್ಕೆ ಈವರೆಗೂ ಒಂದು ರೂಪಾಯಿಯನ್ನೂ ನೀಡಿಲ್ಲ ಎಂದು ಸಿದ್ದರಾಮಯ್ಯ ಆಕ್ಷೇಪಿಸಿದ್ದಾರೆ. ಕೊರೋನಾದಿಂದ ಸಂಕಟದಲ್ಲಿರುವ ರೈತಾಪಿ ಸಮುದಾಯದಲ್ಲಿ ಆತ್ಮಹತ್ಯೆಗಳ ಪ್ರಮಾಣ ಮತ್ತೆ ಹೆಚ್ಚಾಗುತ್ತಿವೆ. ಇಷ್ಟೆಲ್ಲ ಆದರೂ ರಾಜ್ಯ ಸರ್ಕಾರ ಕೈ ಕಟ್ಟಿ ಕುಳಿತಿದೆ. ಕೂಡಲೇ ಬೆಳೆ ನಷ್ಟದ ಸಮೀಕ್ಷೆ ನಡೆಸಬೇಕು, ಸಮರ್ಪಕ ಪರಿಹಾರ ನೀಡಬೇಕೆಂದು ಒತ್ತಾಯಿಸಿದ್ದಾರೆ

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *