ಬಿಗ್ ನ್ಯೂಸ್ : ಎಸ್‍ಡಿಪಿಐ ನಿಷೇಧ ಕುರಿತು ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ, ಇಲ್ಲಿದೆ ಅಪ್ಡೇಟ್ಸ್
ಬೆಂಗಳೂರು,ಆ.20- ರಾಜ್ಯದಲ್ಲಿ ಎಸ್‍ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತಂತೆ, ಕಾನೂನು ಬಾಹಿರ ಚಟುವಟಿಕೆಗಳಲ್ಲಿ ತೊಡಗಿದ್ದರ ಕುರಿತು ಸಾಕ್ಷ್ಯಾಧಾರಗಳ ಸಮೇತ ವರದಿ ಸಲ್ಲಿಸುವಂತೆ ಗೃಹ ಇಲಾಖೆಗೆ ರಾಜ್ಯ ಸರ್ಕಾರ ಸೂಚಿಸಿದೆ.
ಮುಖ್ಯಮಂತ್ರಿ ಯಡಿಯೂರಪ್ಪ ಅಧ್ಯಕ್ಷತೆಯಲ್ಲಿ ಇದು ನಡೆದ ಸಚಿವ ಸಂಪುಟ ಸಭೆಯಲ್ಲಿ , ಎಸ್‍ಡಿಪಿಐ ಸಂಘಟನೆಯನ್ನು ನಿಷೇಧ ಮಾಡುವ ಕುರಿತು ಗಂಭೀರ ಚರ್ಚೆ ನಡೆಯಿತು.
ಎಸ್‍ಡಿಪಿಐ ಒಂದು ರಾಜಕೀಯ ಪಕ್ಷವಾಗಿಯೂ ಗುರುತಿಸಿಕೊಂಡಿರುವ ಹಿನ್ನೆಲೆಯಲ್ಲಿ ಈ ಸಂಘಟನೆ ಕಾನೂನು ಬಾಹಿರ ಚಟುವಟಿಕೆಗಳಲ್ಲಿ ಭಾಗಿಯಾಗಿದ್ದರ ಕುರಿತಂತೆ ಗೃಹ ಇಲಾಖೆಯಿಂದ ವರದಿ ತರಿಸಿಕೊಂಡು ನಂತರ ಕ್ರಮ ಕೈಗೊಳ್ಳಲು ಸರ್ಕಾರ ನಿರ್ಧರಿಸಿದೆ.
ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಜೆ.ಸಿ.ಮಾಧುಸ್ವಾಮಿ, ಎಸ್‍ಡಿಪಿ ಸಂಘಟನೆಯನ್ನು ನಿಷೇಧ ಮಾಡುವ ಬಗ್ಗೆ ಇಂದಿನ ಸಚಿವ ಸಂಪುಟ ಸಭೆಯಲ್ಲಿ ಗಂಭೀರ ಚರ್ಚೆ ಮಾಡಲಾಗಿದೆ.
ಹಾಲಿ ಇರುವ ಕಾನೂನಿನಡಿ ಸಂಘಟನೆಯನ್ನು ನಿಷೇಸಬೇಕೋ ಅಥವಾ 1981ರ ಕಾಯ್ದೆಗೆ ತಿದ್ದುಪಡಿ ಮಾಡಬೇಕೇ ಎಂಬುದರ ಬಗ್ಗೆ ಚರ್ಚೆ ನಡೆಸಲಾಗಿದೆ. ಈ ಸಂಘಟನೆಯು ಯಾವ ಯಾವ ಪ್ರಕರಣಗಳಲ್ಲಿ ಭಾಗಿಯಾಗಿದೆ ಎಂಬ ಬಗ್ಗೆ ಗೃಹ ಇಲಾಖೆ ಸೇರಿದಂತೆ ಮತ್ತಿತರ ಇಲಾಖೆಗಳಿಂದ ವರದಿ ನೀಡಲು ಸೂಚಿಸಲಾಗಿದೆ.