Elections to Legislative Council: ರಾಜ್ಯದ ಪದವೀಧರ, ಶಿಕ್ಷಕರ ಕ್ಷೇತ್ರದ ಒಟ್ಟು 6 ಸ್ಥಾನಗಳಿಗೆ ಮತದಾನ ಆರಂಭ
ಬೆಂಗಳೂರು: ಲೋಕಸಭಾ ಚುನಾವಣೆಯ ಈಗಷ್ಟೇ ಮುಗಿದಿದೆ. ಜನರು ಮತ್ತು ರಾಜಕಾರಣಿಗಳು ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ. ಈತನ್ಮಧ್ಯೆ ಇಂದು ರಾಜ್ಯದಲ್ಲಿ ಮತ್ತೊಂದು ಚುನಾವಣೆ ನಡೆಯುತ್ತಿದೆ. ರಾಜ್ಯ ವಿಧಾನಪರಿಷತ್ತಿನ (Legislative Council Election) ಆರು ಕ್ಷೇತ್ರಗಳಿಗೆ ಇಂದು ಮತದಾನ ನಡೆಯುತ್ತಿದ್ದು, ಈಗಾಗಲೇ ಮತದಾರರು ತಮ್ಮ ಹಕ್ಕು ಚಲಾಯಿಸಲು ಆರಂಭಿಸಿದ್ದಾರೆ.
ಶಿಕ್ಷಕರು ಹಾಗೂ ಪದವೀಧರ ಕ್ಷೇತ್ರಗಳ ಆರು ಸ್ಥಾನಗಳಿಗೆ ಇಂದು ಚುನಾವಣೆ ನಡೆಯುತ್ತಿದ್ದು, ಬೆಂಗಳೂರು ಪದವೀಧರರ ಕ್ಷೇತ್ರ, ಆಗ್ನೇಯ ಶಿಕ್ಷಕರ ಕ್ಷೇತ್ರ, ಈಶಾನ್ಯ ಪದವೀಧರರ ಕ್ಷೇತ್ರ, ನೈರುತ್ಯ ಶಿಕ್ಷಕರು ಹಾಗೂ ಪದವೀಧರರ ಕ್ಷೇತ್ರ ಹಾಗೂ ದಕ್ಷಿಣ ಶಿಕ್ಷಕರ ಕ್ಷೇತ್ರಗಳಿಗೆ ಮತದಾನ ಆರಂಭಗೊಂಡಿದೆ. ಹದಿನೈದಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಬೆಳಿಗ್ಗೆ8 ರಿಂದ ಮತದಾನ ಆರಂಭಗೊಂಡಿದ್ದು, ಸಂಜೆ 4 ಗಂಟೆಗೆ ಮತದಾನ ಮುಕ್ತಾಯಗೊಳ್ಳಲಿದೆ.
ದಕ್ಷಿಣ ಶಿಕ್ಷಕರ ಕ್ಷೇತ್ರದಲ್ಲಿ 11 ಅಭ್ಯರ್ಥಿಗಳ ನಡುವೆ ಪೈಪೋಟಿ ನಡೆಯಲಿದ್ದು, ಪದವೀಧರ ಕ್ಷೇತ್ರದಲ್ಲಿ 2,01,632 ಪುರುಷರು, 161,907 ಮಹಿಳೆಯರು ಹಾಗೂ 34 ಇತರರು ಸೇರಿ ಒಟ್ಟು 3,63,573 ಮತದಾರರು ಇದ್ದಾರೆ. ಶಿಕ್ಷಕರ ಕ್ಷೇತ್ರದಲ್ಲಿ 38,305 ಪುರುಷರು, 31,954 ಮಹಿಳೆಯರು ಹಾಗೂ ಒಬ್ಬರು ಇತರರು ಸೇರಿ ಒಟ್ಟು 70,260 ಮತದಾರರಿದ್ದಾರೆ.
ಅತ್ತ ನೈಋತ್ಯ ಶಿಕ್ಷಕರ ಕ್ಷೇತ್ರಕ್ಕೆ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕೆ.ಕೆ.ಮಂಜುನಾಥ್, ನೈಋತ್ಯ ಪದವಿಧರ ಕ್ಷೇತ್ರದಲ್ಲಿ ಬಿಜೆಪಿ ಬಂಡಾಯ ಅಭ್ಯರ್ಥಿಯಾಗಿ ಕೆ. ರಘುಪತಿ ಭಟ್, ದಕ್ಷಿಣ ಶಿಕ್ಷಕರ ಕ್ಷೇತ್ರದಿಂದ ಜೆಡಿಎಸ್ ಅಭ್ಯರ್ಥಿಯಾಗಿ ವಿವೇಕಾನಂದ, ಅಗ್ನೇಯ ಶಿಕ್ಷಕರ ಕ್ಷೇತ್ರದಿಂದ ರುಪ್ಸಾ ಸಂಘಟನೆ ಅಧ್ಯಕ್ಷ ಲೋಕೇಶ್ ತಾಳಿಕಟ್ಟೆ ಸೇರಿ ಒಟ್ಟು 78 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ.
ಈಶಾನ್ಯ ಪದವೀಧರ ಕ್ಷೇತ್ರದಲ್ಲಿ 19 ಅಭ್ಯರ್ಥಿಗಳಿದ್ದು, ಬೆಂಗಳೂರು ಪದವೀಧರ ಕ್ಷೇತ್ರದಲ್ಲಿ 15 ಅಭ್ಯರ್ಥಿಗಳು ಅಖಾಡದಲ್ಲಿದ್ದಾರೆ. ನೈಋತ್ಯ ಪದವೀಧರ ಕ್ಷೇತ್ರದಲ್ಲಿ 10 ಅಭ್ಯರ್ಥಿಗಳು ಕಣದಲ್ಲಿದ್ದಾರೆ. ಅಗ್ನೇಯ ಶಿಕ್ಷಕರ ಕ್ಷೇತ್ರದಲ್ಲಿ 15 ಮಂದಿ ಸ್ಪರ್ಧಿಸುತ್ತಿದ್ದಾರೆ. ಇನ್ನೂ ನೈಋತ್ಯ ಶಿಕ್ಷಕರ ಕ್ಷೇತ್ರದಲ್ಲಿ ಎಮಟು ಅಭ್ಯರ್ಥಿಗಳು ಪೈಪೋಟಿಗಳಿದಿದ್ದಾರೆ.
ಬಿಬಿಎಂಪಿ ವ್ಯಾಪ್ತಿಯಲ್ಲಿ ಬರುವ ಎಲ್ಲಾ 28 ವಿಧಾನಸಭಾ ಕ್ಷೇತ್ರಗಳಲ್ಲಿ 106 ಮತಗಟ್ಟೆಗಳು ಇರಲಿದ್ದು, ಈಗಾಗಲೇ ಎಲ್ಲಾ ಕಡೆ ಮತದಾನ ಆರಂಭಗೊಂಡಿದೆ. ನಿನ್ನೆ ಬೆಳಗ್ಗೆ 7 ಗಂಟೆಗೆ ಅಣುಕು ಮತದಾನ ನಡೆಯಿತು. ಈ ಸಮಯದಲ್ಲಿ ಮತಗಟ್ಟೆ ಅಧಿಕಾರಿ, ಸಿಬ್ಬಂದಿ ಮಸ್ಟರಿಂಗ್ ಕೇಂದ್ರದಿಂದ ಬ್ಯಾಲೆಟ್ ಬಾಕ್ಸ್, ಬ್ಯಾಲೆಟ್ ಪೇಪರ್ ಸೇರಿದಂತೆ ಮತಗಟ್ಟೆ ಸಾಮಗ್ರಿಗಳನ್ನು ತೆಗೆದುಕೊಂಡು ನಿಯೋಜಿಸಲ್ಪಟ್ಟ ವಾಹನಗಳ ಮೂಲಕ ಪೊಲೀಸ್ ಬಂದೋಬಸ್ತ್ನಲ್ಲಿ ಮತಗಟ್ಟೆಗಳಿಗೆ ತೆರಳಿದರು.
ಪರಿಶೀಲನೆಯ ವೇಳೆ ಚುನಾವಣಾ ವಿಭಾಗದ ವಿಶೇಷ ಆಯುಕ್ತ ಸೆಲ್ವಮಣಿ, ಅಪರ ಜಿಲ್ಲಾ ಚುನಾವಣಾಧಿಕಾರಿ ಡಾ.ಕೆ.ಹರೀಶ್ ಕುಮಾರ್, ಸ್ನೇಹಲ್, ವಿನೋತ್ ಪ್ರಿಯಾ, ಚುನಾವಣಾ ವಿಭಾಗದ ಸಹಾಯಕ ಆಯುಕ್ತ ರವಿ ಚಂದ್ರ ನಾಯ್ಕ್ ಸೇರಿದಂತೆ ಇನ್ನಿತರೆ ಸಂಬಂಧಪಟ್ಟ ಅಧಿಕಾರಿಗಳು ಉಪಸ್ಥಿತರಿದ್ದರು.