ಪ್ರಮಾಣ ವಚನ ಸ್ವೀಕರಿಸುವ ಮುನ್ನ ಗಾಂಧೀಜಿ ಮತ್ತು ವಾಜಪೇಯಿ ಅವರಿಗೆ ನರೇಂದ್ರ ಮೋದಿ ಪುಷ್ಪ ನಮನ
Narendra Modi Oath Taking Ceremony: ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸುವ ಮುನ್ನ, ನರೇಂದ್ರ ಮೋದಿ ಅವರು ಜೂನ್ 9 ರಂದು ದೆಹಲಿಯ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಸ್ಮಾರಕಕ್ಕೆ ಭೇಟಿ ನೀಡಿ ನಮನ ಸಲ್ಲಿಸಿದರು. ಇದಕ್ಕೂ ಮುನ್ನ ರಾಜ್ಘಾಟ್ನಲ್ಲಿ ಮಹಾತ್ಮ ಗಾಂಧಿ ಅವರಿಗೆ ಪುಷ್ಪ ನಮನ ಸಲ್ಲಿಸಿದರು.
ರಾಷ್ಟ್ರ ರಾಜಧಾನಿಯಲ್ಲಿರುವ ರಾಷ್ಟ್ರೀಯ ಯುದ್ಧ ಸ್ಮಾರಕಕ್ಕೂ ನರೇಂದ್ರ ಮೋದಿ ಭೇಟಿ ನೀಡಿದರು. ನಿಯೋಜಿತ ಪ್ರಧಾನಿಯ ಮೋದಿ ಅವರಿಗೆ ನಿರ್ಗಮಿತ ಸಂಪುಟದ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಸಾಥ್ ನೀಡಿದರು.
ನರೇಂದ್ರ ಮೋದಿ ಇಂದು ಅಂದರೆ ಜೂನ್ 9 ರಂದು ಮೂರನೇ ಅವಧಿಗೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಸಂಜೆ 7.15 ಕ್ಕೆ ಪ್ರಧಾನಿಯಾಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಇಂದೇ ಅವರ ಮಂತ್ರಿಮಂಡಲವೂ ಪ್ರಮಾಣವಚನ ಸ್ವೀಕರಿಸಲಿದೆ.
ಮಾಜಿ ಪ್ರಧಾನಿ ಜವಾಹರಲಾಲ್ ನೆಹರು ನಂತರ ಸತತ ಮೂರನೇ ಅವಧಿಗೆ ನರೇಂದ್ರ ಮೋದಿ ಪ್ರಧಾನಿಯಾಗಿ ಆಯ್ಕೆಯಾಗಿದ್ದಾರೆ. ಮೋದಿ ಪ್ರಮಾಣ ವಚನ ಸ್ವೀಕಾರ ಸಮಾರಂಭಕ್ಕೆ ನೆರೆಹೊರೆಯ ದೇಶದ ಹಲವಾರು ನಾಯಕರನ್ನು ವಿಶೇಷ ಅತಿಥಿಗಳಾಗಿ ಆಹ್ವಾನಿಸಲಾಗಿದೆ.
543 ಲೋಕಸಭಾ ಸ್ಥಾನಗಳ ಪೈಕಿ ಬಿಜೆಪಿ 240 ಸ್ಥಾನಗಳನ್ನು ಗೆದ್ದಿದ್ದು, ಎನ್ಡಿಎ ಮೈತ್ರಿಕೂಟ 292 ಸ್ಥಾನಗಳನ್ನು ಪಡೆದುಕೊಂಡಿದೆ. ಕಾಂಗ್ರೆಸ್ 100 ಸ್ಥಾನ ಗಳಿಸಿದೆ. ಸಮಾಜವಾದಿ ಪಕ್ಷ 37 ಸ್ಥಾನಗಳನ್ನು ಪಡೆದರೆ, ತೃಣಮೂಲ ಕಾಂಗ್ರೆಸ್ 29, ಡಿಎಂಕೆ 22 ಸ್ಥಾನಗಳನ್ನು ಗೆಲ್ಲುವಲ್ಲಿ ಯಶಸ್ವಿಯಾಗಿದೆ.