Kannada Reservation Bill: ‘ಕನ್ನಡ ಬಿಲ್‌’ಗೆ ತಡೆ; ಇದು ಕನ್ನಡ-ಕನ್ನಡಿಗ-ಕರ್ನಾಟಕಕ್ಕೆ ಅವಮಾನ ಅಂತ ವಿಜಯೇಂದ್ರ ಕಿಡಿ

ಬೆಂಗಳೂರು: ಖಾಸಗಿ ಕಂಪನಿಗಳ ಉದ್ಯೋಗದಲ್ಲಿ (Jobs) ಕನ್ನಡಿಗರಿಗೆ ಮೀಸಲಾತಿ (Reservation) ನೀಡುವ ವಿಧೇಯಕ ವಿಚಾರದಲ್ಲಿ ಸರ್ಕಾರ ಯೂಟರ್ನ್‌ ಹೊಡೆದಿದೆ . ಕನ್ನಡಿಗರಿಗೆ ಖಾಸಗಿ ವಲಯದ ಸಂಸ್ಥೆಗಳು, ಕೈಗಾರಿಕೆಗಳು ಹಾಗೂ ಉದ್ದಿಮೆಗಳಲ್ಲಿ ಮೀಸಲಾತಿ ಕಲ್ಪಿಸುವ ಸಂಬಂಧ ಸಂಪುಟ ಅನುಮೋದನೆ ನೀಡಲಾಗಿದ್ದ ವಿಧೇಯಕವನ್ನು (Bill) ತಾತ್ಕಾಲಿಕವಾಗಿ ತಡೆಹಿಡಿಯಲಾಗಿದೆ. ವಿಧೇಯಕಕ್ಕೆ ಉದ್ಯಮಿಗಳಿಂದ (Businessman ) ಭಾರೀ ವಿರೋಧ ಹಿನ್ನೆಲೆ ಇಂದು ಮಂಡಿಸಬೇಕಿದ್ದ ಮಸೂದೆಯನ್ನ ಸರ್ಕಾರ ತಡೆಹಿಡಿದಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ಮತ್ತೊಮ್ಮೆ ಪರಾಮರ್ಶಿಸಿ ನಿರ್ಧಾರ ಕೈಗೊಳ್ಳೋದಾಗಿ ಸಿಎಂ ಸಿದ್ದರಾಮಯ್ಯ (CM Siddaramaiah) ಎಕ್ಸ್‌ ಮೂಲಕ ಮಾಹಿತಿ ನೀಡಿದ್ದಾರೆ.

ಕನ್ನಡಿಗರಿಗೆ ಮಾಡಿದ ಅವಮಾನ

ಈ ಬಗ್ಗೆ ಇಂದು ಸಚಿವ ಸಂತೋಷ ಲಾಡ್, ಕಂದಾಯ ಸಚಿವ ಕೃಷ್ಣ ಭೈರೆಗೌಡ, ಐಟಿಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಸಿಎಂ ಕಾನೂನು ಸಲಹೆಗಾರ ಪೊನ್ನಣ್ಣ ಜಂಟಿ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಲಿದ್ದಾರೆ. ಈ ನಡುವೆ ಮಸೂದೆಗೆ ತಡೆಹಿಡಿರುವ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಸಿಎಂ ಸಿದ್ದರಾಮಯ್ಯ ಅವರು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

 

ಎಕ್ಸ್ ನಲ್ಲಿ ಈ ಕುರಿತು ಪ್ರತಿಕ್ರಿಯೆ ನೀಡಿರುವ ವಿಜಯೇಂದ್ರ ಅವರು, “ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ತಂದದ್ಯಾಕೆ? ತಡೆಹಿಡಿದಿದ್ದೇಕೆ? ಕನ್ನಡಿಗರ ಬದುಕಿನೊಂದಿಗೆ ಚೆಲ್ಲಾಟವೇಕೆ? ಅಪಮಾನಿಸಲು ನಿಮಗೆ ಕನ್ನಡಿಗರೇ ಬೇಕಿತ್ತೆ?” ಕನ್ನಡಿಗರಿಗೆ ಉದ್ಯೋಗ ಕೊಡುವ ವಿಧೇಯಕ ದಿಢೀರ್ ತಡೆಹಿಡಿದು ಕನ್ನಡ-ಕನ್ನಡಿಗ-ಕರ್ನಾಟಕವನ್ನು ಅಪಮಾನಿಸಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದ ಕರ್ನಾಟಕದ ಸರ್ಕಾರದ ರಣಹೇಡಿ ನಿರ್ಧಾರವನ್ನು ಸಮಸ್ತ ಕರುನಾಡ ಜನರ ಪರವಾಗಿ ಖಂಡಿಸುವೆ.

‘ಈ ನೆಲದಲ್ಲಿ ಬದುಕು ಮಾಡುತ್ತ ಕನ್ನಡ ಕಲಿತವರೆಲ್ಲ ಕನ್ನಡಿಗರೇ’ ಎಂದು ಪರಿಗಣಿಸಿ ಈ ನೆಲದ ಮಕ್ಕಳ ಉದ್ಯೋಗದ ಹಕ್ಕನ್ನು ರಕ್ಷಿಸುವ ನಿಟ್ಟಿನಲ್ಲಿ ಕನ್ನಡಪರ ಹೋರಾಟಗಾರರ ಬಹುದಿನಗಳ ಹೋರಾಟದ ಬೇಡಿಕೆಗೆ ನಿನ್ನೆಯಷ್ಟೇ ‘ಅಸ್ತು ‘ಎಂದು ಹೆಜ್ಜೆ ಇಟ್ಟಿದ್ದ ಸರ್ಕಾರ ದಿನ ಕಳೆಯುವುದರೊಳಗೇ ‘ಸುಸ್ತು’ ಹೊಡೆದಿರುವುದೇಕೆ?

ಮುಖ್ಯಮಂತ್ರಿಗಳು ಈ ಕುರಿತು ತಮ್ಮ X ಖಾತೆಯಲ್ಲಿ ಮೂರು ಬಾರಿ ‘ಯೂ ಟರ್ನ್ ಹೊಡೆದು’ ಕೊನೆಗೂ ವಿಧೇಯಕ ಸದ್ಯಕ್ಕೆ ಮಂಡಿಸುತ್ತಿಲ್ಲ ಎನ್ನುವ ಅಂಜುಬುರುಕ ನಿರ್ಧಾರದ ಹಿಂದೆ ನಾಡಿನ ಆತ್ಮ ಗೌರವ, ಕನ್ನಡಿಗರ ಸ್ವಾಭಿಮಾನ ಹಾಗೂ ಕನ್ನಡತನವನ್ನು ಹಿಮ್ಮೆಟ್ಟಿಸುವ ಕರ್ನಾಟಕ ವಿರೋಧಿ ಶಕ್ತಿಗಳ ಲಾಬಿ ಮೇಲುಗೈ ಸಾಧಿಸಿರುವಂತಿದೆ. ಇಂಡಿ ಕೂಟದಲ್ಲಿ ಯಾವಾಗ ಬಿರುಕು ಮೂಡುತ್ತದೋ ಎಂಬ ಭೀತಿಯಲ್ಲಿರುವ ದೆಹಲಿಯ ದೊಡ್ಡ ‘ಕೈ’ ಮುಖ್ಯಮಂತ್ರಿಗಳ ಕೈ ಕಟ್ಟಿಹಾಕಿರಲೇಬೇಕು, ಇಲ್ಲದಿದ್ದರೇ ಕನ್ನಡಿಗರ ಬದುಕು ಹಸನಾಗಿಸುವ ವಿಧೇಯಕವನ್ನು ಬದಿಗೆ ಸರಿಸುವ ಪಲಾಯನವಾದಿ ನಿರ್ಧಾರ ಕೈಗೊಳ್ಳಲು ಹೇಗೆ ಸಾಧ್ಯ?

ವಿಜಯೇಂದ್ರ ಟ್ವೀಟ್

ಸದ್ಯ ಕಾಂಗ್ರೆಸ್ ಸರ್ಕಾರ ಹಾಗೂ ಮುಖ್ಯಮಂತ್ರಿಗಳನ್ನು ಮುತ್ತಿರುವ ಮಹರ್ಷಿ ವಾಲ್ಮೀಕಿ ನಿಗಮ ಹಾಗೂ ಮುಡಾ ಹಗರಣಗಳಿಂದ ತತ್ತರಿಸಿರುವ ಕಾಂಗ್ರೆಸ್ ತನ್ನ ಮುಖ ಮುಚ್ಚಿಕೊಳ್ಳಲು ಹಗರಣದ ಚರ್ಚೆ ಹಾಗೂ ತನಿಖೆಯನ್ನು ದಿಕ್ಕು ತಪ್ಪಿಸಲು ಹಾಗೂ ಜನರ ಗಮನ ವಿಚಲಿತಗೊಳಿಸುವ ಕುತಂತ್ರದಿಂದ ಕನ್ನಡ ಪರ ವಿಧೇಯಕವನ್ನು ತಡೆಹಿಡಿದು ಗುರಾಣಿ ಮಾಡಿಕೊಳ್ಳುವ ಹುನ್ನಾರ ನಡೆಸಿದ್ದರೆ ರಾಜ್ಯದ ಜನತೆ
ಕಾಂಗ್ರೆಸ್ಸಿಗರನ್ನು ಎಂದಿಗೂ ಕ್ಷಮಿಸರು.

 

ವಿಧೇಯಕದ ಕುರಿತು ಮಾಧ್ಯಮಗಳಲ್ಲಿ ಹೆಮ್ಮೆಯಿಂದ ಬೀಗಿದ್ದ ಸಚಿವರುಗಳು ಹಾಗೂ ಕಾಂಗ್ರೆಸ್ ಮುಖಂಡರು ಕೆಲವೇ ಸಮಯದ ಅಂತರದಲ್ಲಿ ನಾಡ ಜನರ ಬಗೆಗಿನ ಐತಿಹಾಸಿಕ ವಿಧೇಯಕ ಹಿಂತೆಗೆದುಕೊಂಡ ಬಗ್ಗೆ ಸಮಸ್ತ ಕನ್ನಡ ಜನತೆಯ ಮುಂದೆ ತಲೆ ಎತ್ತಿ ಮಾತನಾಡುವ ನೈತಿಕತೆ ಕಳೆದುಕೊಂಡಿದ್ದಾರೆ. ಅರ್ಹತೆ ಇದ್ದರೂ ಉದ್ಯೋಗಾವಕಾಶಗಳಿಂದ ವಂಚಿತರಾಗಿ ಹತಾಶೆಗೊಳಗಾಗಿದ್ದ ಗ್ರಾಮೀಣ ಭಾಗದ ಲಕ್ಷಾಂತರ ನಿರುದ್ಯೋಗಿಗಳಿಗೆ ಭರವಸೆಯ ಬೆಳಕು ಮೂಡಿಸಿದ್ದ ಕನ್ನಡಿಗರ ಉದ್ಯೋಗ ಮೀಸಲಾತಿಯ ವಿಧೇಯಕ ಪ್ರಸಕ್ತ ಅಧಿವೇಶನದಲ್ಲೇ ಸರ್ಕಾರ ಮಂಡಿಸಲಿ, ಇಲ್ಲವೇ ಕನ್ನಡಿಗರ ಆಕ್ರೋಶ ಎದುರಿಸಲು ಸಿದ್ದವಾಗಲಿ ಎಂದು ವಿಜಯೇಂದ್ರ ಅವರು ಎಚ್ಚರಿಕೆ ನೀಡಿದ್ದಾರೆ.

 

S S Benakanalli

Founder , Director Of KK NEWS KANNADA _ S S BENAKANAHALLI

Leave a Reply

Your email address will not be published. Required fields are marked *