ನನ್ನ ವಿರುದ್ಧ BJP ಷಡ್ಯಂತ್ರ ನಡೆಸುತ್ತಿದ್ದು, ಅಪಪ್ರಚಾರದಲ್ಲಿ ತೊಡಗಿದೆ: ಸಿಎಂ ಸಿದ್ದರಾಮಯ್ಯ
ಸಂಡೂರು (ಬಳ್ಳಾರಿ ಜಿಲ್ಲೆ): ಬಿಜೆಪಿ ನನ್ನ ವಿರುದ್ಧ ಷಡ್ಯಂತ್ರ ನಡೆಸುತ್ತಿದ್ದು, ಸರ್ಕಾರದ ವಿರುದ್ಧ ಅಪಪ್ರಚಾರ ನಡೆಸುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸೋಮವಾರ ಆರೋಪಿಸಿದರು.
ಬಳ್ಳಾರಿ ಜಿಲ್ಲೆಯ ಸಂಡೂರಿನಲ್ಲಿ ಐದು ಗ್ಯಾರಂಟಿ ಯೋಜನೆಗಳ ಫಲಾನುಭವಿಗಳ ಸಮಾವೇಶವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಸಮಾವೇಶದಲ್ಲಿ ಮುಖ್ಯಮಂತ್ರಿಗಳು 400 ಕೋಟಿಗೂ ಅಧಿಕ ಮೊತ್ತದ ಪೂರ್ಣಗೊಂಡಿರುವ ಯೋಜನೆಗಳನ್ನು ಸಂಡೂರಿನ ಜನತೆಗೆ ಸಮರ್ಪಿಸಿದರು ಮತ್ತು ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಿದರು.
ಈ ವರ್ಷದ ಆರಂಭದಲ್ಲಿ ಕಾಂಗ್ರೆಸ್‌ನ ಇ ತುಕಾರಾಂ ಲೋಕಸಭೆಗೆ ಆಯ್ಕೆಯಾದ ಬೆನ್ನಲ್ಲೇ ಸಂಡೂರು ಕ್ಷೇತ್ರಕ್ಕೆ ಉಪಚುನಾವಣೆ ನಡೆಯಬೇಕಿದ್ದು, ಮುಂಬರುವ ಉಪಚುನಾವಣೆಯಲ್ಲಿ ಸಂಡೂರಿನ ಮತದಾರರು ಕಾಂಗ್ರೆಸ್ ಗೆಲ್ಲಿಸಿ ಬಿಜೆಪಿಗೆ ತಕ್ಕ ಪಾಠ ಕಲಿಸಬೇಕು ಎಂದು ಸಿಎಂ ಮನವಿ ಮಾಡಿದರು.
2023ರ ವಿಧಾನಸಭಾ ಚುನಾವಣೆಗೆ ಮೊದಲು ನೀಡಿದ್ದ ಐದು ಗ್ಯಾರಂಟಿ ಭರವಸೆಗಳನ್ನು ರಾಜ್ಯ ಸರ್ಕಾರ ಯಶಸ್ವಿಯಾಗಿ ಜಾರಿಗೊಳಿಸಿದೆ. ನಾವು ನಮ್ಮ ಭರವಸೆಗಳನ್ನು ಈಡೇರಿಸುತ್ತಿದ್ದು, ಬಿಜೆಪಿಯವರು ಸರ್ಕಾರದ ವಿರುದ್ಧ ಅಪಪ್ರಚಾರದಲ್ಲಿ ತೊಡಗಿದ್ದಾರೆಂದು ಕಿಡಿಕಾರಿದರು.
ಸರ್ಕಾರ ಈ ಪ್ರದೇಶದಲ್ಲಿ 12,000 ಮನೆಗಳನ್ನು ನಿರ್ಮಿಸಲಾಗುತ್ತಿದ್ದು, ಇದು ಸಂಡೂರಿನಲ್ಲಿ ಸಾಕಷ್ಟು ಬದಲಾವಣೆಯನ್ನು ತರುತ್ತದೆ ಎಂದು ಹೇಳಿದರು.
ಇದೇ ವೇಳೆ ತೆರಿಗೆ ಹಂಚಿಕೆ ವಿಚಾರ ಹಿಡಿದು ಕೇಂದ್ರ ಸರ್ಕಾರದ ವಿರುದ್ಧ ಮುಖ್ಯಮಂತ್ರಿಗಳು ವಾಗ್ದಾಳಿ ನಡೆಸಿದರು.
ಕರ್ನಾಟಕವು ತೆರಿಗೆ ಕೊಡುಗೆಗಳಲ್ಲಿ ಅಗ್ರ ರಾಜ್ಯಗಳಲ್ಲಿ ಒಂದಾಗಿದೆ, ಆದರೆ, ನಮಗೆ ನಮ್ಮ ಹಕ್ಕಿನ ಪಾಲನ್ನು ನಿರಾಕರಿಸಲಾಗಿದೆ. ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಸೇರಿದಂತೆ ಕರ್ನಾಟಕದ ಬಿಜೆಪಿ ನಾಯಕರಿಗೆ ಕೇಂದ್ರದಿಂದ ರಾಜ್ಯದ ಹಕ್ಕು ಕೇಳುವ ಧೈರ್ಯವಿಲ್ಲ. ಇದು ಸಂಡೂರು ಮತ್ತು ಕರ್ನಾಟಕದ ಜನತೆಗೆ ಮಾಡಿದ ದ್ರೋಹವಾಗಿದೆ ಎಂದು ಹೇಳಿದರು.
ಬಳಿಕ ಮಾತನಾಡಿದ ಉಪ ಮುಖ್ಯಮಂತ್ರಿ ಹಾಗೂ ರಾಜ್ಯ ಕಾಂಗ್ರೆಸ್ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು, ಈ ಹಿಂದೆ ಬಿಜೆಪಿಯವರು ಐದು ಗ್ಯಾರಂಟಿ ಯೋಜನೆಗಳನ್ನು ಟೀಕಿಸಿದ್ದರು, ಆದರೆ, ಈಗ ಅವರಿಗೂ ಈ ಯೋಜನೆಗಳು ಜನರಲ್ಲಿ ಹೇಗೆ ಜನಪ್ರಿಯವಾಗಿವೆ ಎಂಬುದು ಅರಿವಾಗಿದೆ ಎಂದು ಹೇಳಿದರು.
ಈ ಸಂದರ್ಭದಲ್ಲಿ ಸಚಿವರಾದ ಜಮೀರ್ ಅಹ್ಮದ್ ಖಾನ್, ಸಂತೋಷ್ ಲಾಡ್, ಸತೀಶ್ ಜಾರಕಿಹೊಳಿ ಮತ್ತಿತರರು ಉಪಸ್ಥಿತರಿದ್ದರು.