Bharat Bandh in Karnataka: ರಾಜ್ಯದಲ್ಲಿ ಬೆಳಗ್ಗೆ 6ರಿಂದಲೇ ಭಾರತ್ ಬಂದ್; ಜಿಟಿ ಮಳೆಯ ನಡುವೆಯೂ ರೈತರ ಪ್ರತಿಭಟನೆ
ಹಲವು ಜಿಲ್ಲೆಗಳಲ್ಲಿ ಬೆಳಗ್ಗೆಯೇ ರೈತರು ರಸ್ತೆಗಿಳಿದು ಪ್ರತಿಭಟನೆ ನಡೆಸಿದ್ದಾರೆ. ಟೈರ್ಗೆ ಬೆಂಕಿ ಹಚ್ಚಿ, ಪ್ರತಿಕೃತಿ ದಹಿಸಿ ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಆದರೆ ಎಲ್ಲಿಯೂ ಹಿಂಸಾಚಾರ ನಡೆಯದೇ ಶಾಂತಿಯುತವಾಗಿ ಬಂದ್ ನಡೆಯುವ ಸಾಧ್ಯತೆ ಇದೆ.
ಬೆಂಗಳೂರು(ಡಿ. 08): ಕೇಂದ್ರ ಕೃಷಿ ಕಾಯ್ದೆಗಳನ್ನ ಕೈಬಿಡುವಂತೆ ಆಗ್ರಹಿಸಿ ರೈತ ಸಂಘಟನೆಗಳು ಕರೆ ನೀಡಿರುವ ಭಾರತ್ ಬಂದ್ಗೆ ರಾಜ್ಯದ ಹಲವೆಡೆ ರೈತರು ಬೆಳ್ಳಂಬೆಳಗ್ಗೆಯೇ ಬೀದಿಗಿಳಿದು ಹೋರಾಟ ಪ್ರಾರಂಭಿಸಿದ್ದಾರೆ. ಬಹುತೇಕ ಕನ್ನಡಪರ ಸಂಘಟನೆಗಳು ರೈತರ ಹೋರಾಟಕ್ಕೆ ಬೆಂಬಲ ಸೂಚಿಸಿ ಬಂದ್ನಲ್ಲಿ ಪಾಲ್ಗೊಂಡಿವೆ. ಬಂದ್ನಿಂದ ಸಾಮಾನ್ಯ ಜನರಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಎಲ್ಲಿಯೂ ಬಲವಂತವಾಗಿ ಬಂದ್ ಮಾಡಿಸುತ್ತಿಲ್ಲ. ಈ ಹಿನ್ನೆಲೆಯಲ್ಲಿ ಸಾಮಾನ್ಯ ಜನಜೀವನ ಯಥಾಸ್ಥಿತಿಯಲ್ಲಿದೆ. ಕೋಲಾರ, ದಾವಣಗೆರೆ ಕೊಪ್ಪಳ, ಹುಬ್ಬಳ್ಳಿ, ಬೆಳಗಾವಿಯಲ್ಲಿ ಇಂದು ಬೆಳಗ್ಗೆ ಆರು ಗಂಟೆಗೇ ರೈತರು ಪ್ರತಿಭಟನೆ ಪ್ರಾರಂಭಿಸಿದ್ದಾರೆ. ಕೆಲವೆಡೆ ಜಿಟಿಜಿಟಿ ಮಳೆಯನ್ನೂ ಲೆಕ್ಕಿಸದೆ ಟೈರ್ಗೆ ಬೆಂಕಿ ಹಚ್ಚಿ ಮತ್ತು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇನ್ನೂ ಅನೇಕ ಜಿಲ್ಲೆಗಳಲ್ಲಿ ಪ್ರತಿಭಟನೆಗಳು ತಡವಾಗಿ ಆರಂಭವಾಗುವ ನಿರೀಕ್ಷೆ ಇದೆ. ಆದರೆ, ಎಲ್ಲೂ ಕೂಡ ಜನಜೀವನ ಅಸ್ತವ್ಯಸ್ತಗೊಂಡಿಲ್ಲ. ಬೆಳಗಿನ ಮಾರುಕಟ್ಟೆ ಇತ್ಯಾದಿ ವ್ಯಾಪಾರ ವಹಿವಾಟು ಎಂದಿನಂತೆ ಇದೆ. ಜನ ಸಂಚಾರದಲ್ಲೂ ಯಾವುದೇ ವ್ಯತ್ಯಾಸ ಕಂಡುಬಂದಿಲ್ಲ.
ಬೆಂಗಳೂರಿನಲ್ಲಿ ಬಂದ್ ಹಿನ್ನೆಲೆಯಲ್ಲಿ ಅಗತ್ಯ ಮುಂಜಾಗ್ರತಾ ಕ್ರಮಗಳನ್ನ ಕೈಗೊಳ್ಳಲಾಗಿದೆ. ಫ್ರೀಡಂ ಪಾರ್ಕ್, ಟೌನ್ ಹಾಲ್ ಮೊದಲಾದೆಡೆ ರೈತರು ಸೇರುವ ನಿರೀಕ್ಷೆ ಹಿನ್ನೆಲೆಯಲ್ಲಿ ಟ್ರಾಫಿಕ್ ಜಾಮ್ ಉಂಟಾಗದಂತೆ ಸಂಚಾರದಲ್ಲಿ ಕೆಲ ಬದಲಾವಣೆಗಳನ್ನ ಮಾಡಲಾಗಿದೆ. ಪ್ರಮುಖ ಕೊಂಡಿ ರಸ್ತೆಯಾದ ನೃಪತುಂಗ ರಸ್ತೆಯಲ್ಲಿ ಇವತ್ತು ಒಂದು ದಿನದ ಮಟ್ಟಿಗೆ ದ್ವಿಮುಖ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ವಿಧಾನಸೌಧದಲ್ಲಿ ನಡೆಯುವ ಅಧಿವೇಶನಕ್ಕೆ ತೊಂದರೆ ಆಗದ ನಿಟ್ಟಿನಲ್ಲಿ ಸುತ್ತಮುತ್ತಲ ಪ್ರದೇಶಗಳಲ್ಲಿ ಭದ್ರತೆ ಮತ್ತು ಟ್ರಾಫಿಕ್ ನಿಯಂತ್ರಣ ವ್ಯವಸ್ಥೆ ಮಾಡಲಾಗಿದೆ.