‘ರೈತರ ಪ್ರತಿಭಟನೆ ಒಂದು ರಾಜ್ಯಕ್ಕೆ ಸೀಮಿತವಾಗಿದೆ, ಅದಕ್ಕೂ ಶೀಘ್ರ ಪರಿಹಾರ’: ಕೇಂದ್ರ ಸಚಿವ ತೋಮರ್
ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಒಂದು “ಅಪವಾದ” ಮತ್ತು “ಒಂದು ರಾಜ್ಯಕ್ಕೆ ಸೀಮಿತವಾಗಿದೆ” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ ಹೇಳಿದ್ದಾರೆ.
ನವದೆಹಲಿ: ರಾಷ್ಟ್ರ ರಾಜಧಾನಿ ದೆಹಲಿಯ ಗಡಿಯಲ್ಲಿ ನಡೆಯುತ್ತಿರುವ ರೈತರ ಪ್ರತಿಭಟನೆ ಒಂದು “ಅಪವಾದ” ಮತ್ತು “ಒಂದು ರಾಜ್ಯಕ್ಕೆ ಸೀಮಿತವಾಗಿದೆ” ಎಂದು ಕೇಂದ್ರ ಕೃಷಿ ಸಚಿವ ನರೇಂದ್ರ ಸಿಂಗ್ ತೋಮರ್ ಬುಧವಾರ ಹೇಳಿದ್ದಾರೆ.
ಕೈಗಾರಿಕಾ ಸಂಸ್ಥೆ ಅಸ್ಸೋಚಮ್ ಆಯೋಜಿಸಿದ ವರ್ಚುವಲ್ ಸಮ್ಮೇಳನದಲ್ಲಿ ಮಾತನಾಡಿದ ಸಚಿವರು, ಸರ್ಕಾರ ಮತ್ತು ರೈತ ಸಂಘಟನೆಗಳೊಂದಿಗೆ ಮಾತುಕತೆ ನಡೆಸುತ್ತಿರುವುದರಿಂದ ರೈತರ ಸಮಸ್ಯೆಗೆ ಶೀಘ್ರ ಪರಿಹಾರವಾಗಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

“ಕೃಷಿ ಕ್ಷೇತ್ರದಲ್ಲಿ ಇತ್ತೀಚಿನ ಸುಧಾರಣೆಗಳಿಂದಾಗಿ ದೇಶದಲ್ಲಿ ಉತ್ಸಾಹದ ವಾತಾವರಣವಿದೆ” ಎಂದು ಕೇಂದ್ರ ಸರ್ಕಾರ ಇತ್ತೀಚಿಗೆ ಜಾರಿಗೆ ತಂದ ಮೂರು ಹೊಸ ಕೃಷಿ ಕಾನೂನುಗಳನ್ನು ಪ್ರಸ್ತಾಪಿಸಿದರು.
“ಈಗ ನಡೆಯುತ್ತಿರುವ ಪ್ರತಿಭಟನೆ ಒಂದು ಅಪವಾದ ಮತ್ತು ಈ ಆಂದೋಲನ ಕೇವಲ ಒಂದು ರಾಜ್ಯಕ್ಕೆ ಸೀಮಿತವಾಗಿದೆ. ನಾವು ರೈತರೊಂದಿಗೆ ಮಾತುಕತೆ ನಡೆಸುತ್ತಿದ್ದೇವೆ. ಶೀಘ್ರದಲ್ಲೇ ಸಮಸ್ಯೆ ಪರಿಹಾರವಾಗಲಿದೆ ಎಂದು ತೋಮರ್ ಅವರು ಹೇಳಿದ್ದಾರೆ.
ರೈತರ ಆದಾಯವನ್ನು ಹೆಚ್ಚಿಸಲು ಮತ್ತು ಕೃಷಿ ಕ್ಷೇತ್ರವನ್ನು ಲಾಭದಾಯಕವಾಗಿಸಲು ಕೇಂದ್ರ ಸರ್ಕಾರ ಕಳೆದ ಆರು ವರ್ಷಗಳಲ್ಲಿ ಹಲವು ಸುಧಾರಣಾ ಕ್ರಮಗಳನ್ನು ಕೈಗೊಂಡಿದೆ ಎಂದು ತೋಮರ್ ಅವರು ತಿಳಿಸಿದರು.