ಪ್ರಧಾನಿ ಮೋದಿಯಿಂದ ಡಿ. 25ಕ್ಕೆ “ಕಿಸಾನ್ ಸಮ್ಮಾನ್” ಕಂತು ಬಿಡುಗಡೆ, ರೈತರೊಂದಿಗೆ ಸಂವಾದ
ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಿದ್ದು, ದೆಹಲಿಯಲ್ಲಿ ಪ್ರಧಾನಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ.
ಬೆಂಗಳೂರು: ಭಾರತ ರತ್ನ, ಮಾಜಿ ಪ್ರಧಾನಿ ದಿ. ಅಟಲ್ ಬಿಹಾರಿ ವಾಜಪೇಯಿ ಅವರ ಜನ್ಮದಿನದ ಅಂಗವಾಗಿ ಕಿಸಾನ್ ಸಮ್ಮಾನ್ ದಿನಾಚರಣೆಯನ್ನು ದೇಶಾದ್ಯಂತ ಹಮ್ಮಿಕೊಳ್ಳಲಿದ್ದು, ದೆಹಲಿಯಲ್ಲಿ ಪ್ರಧಾನಮಂತ್ರಿಗಳು ಕಾರ್ಯಕ್ರಮಕ್ಕೆ ಚಾಲನೆ ನೀಡಿದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರು ತಿಳಿಸಿದ್ದಾರೆ.
ಇಂದು ವಿಧಾನಸೌಧದ ಬಿಜೆಪಿ ಶಾಸಕಾಂಗ ಪಕ್ಷದ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಸಚಿವರು, ಮುಖ್ಯಮಂತ್ರಿಗಳು ಎಪಿಎಂಸಿ ಇಲ್ಲವೇ ಸಹಕಾರ ಇಲಾಖೆಯಲ್ಲಿ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದಾರೆ. ಅಲ್ಲದೆ, ಪ್ರಧಾನಮಂತ್ರಿಗಳ ಭಾಷಣವನ್ನು ಎಲ್ಲ ರೈತರು ವೀಕ್ಷಿಸಲು ಅನುಕೂಲವಾಗಲು ರಾಜ್ಯದ ಎಪಿಎಂಸಿಗಳಲ್ಲಿ ವ್ಯವಸ್ಥೆ ಮಾಡಲಾಗುವುದು ಎಂದು ಸಚಿವರು ತಿಳಿಸಿದರು.

ಜನವರಿ ಮೊದಲ ವಾರದಲ್ಲಿ ಎಪಿಎಂಸಿಯಿಂದ ಆಗುವ ಅನುಕೂಲಗಳ ಬಗ್ಗೆ ಬೆಂಗಳೂರಿನಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಚಾಲನೆ ನೀಡಲಾಗುವುದು. ಬಳಿಕ 30 ಜಿಲ್ಲೆಗಳಲ್ಲೂ ಸಹ ಕಾರ್ಯಕ್ರಮ ಮಾಡಿ ರೈತರಿಗೆ ಎಪಿಎಂಸಿ ಕಾಯ್ದೆಯ ತಿದ್ದುಪಡಿಯಿಂದಾಗುವ ಅನುಕೂಲ ಹಾಗೂ ಎಂಎಸ್ ಪಿ ಅಂದರೇನು ಎಂಬಿತ್ಯಾದಿ ಕಾರ್ಯಕ್ರಮವನ್ನು ಹಮ್ಮಿಕೊಳ್ಳುತ್ತೇವೆ. ಈ ಸಂದರ್ಭದಲ್ಲಿ ರಾಜ್ಯದ 162 ಎಪಿಎಂಸಿಗಳಿಗೂ ಭೇಟಿ ನೀಡಿ ಕಾಯ್ದೆಯ ತಿದ್ದುಪಡಿ ಬಗ್ಗೆ ಅರಿವು ಮೂಡಿಸಲಾಗುವುದು ಎಂದು ಸಚಿವರು ಹೇಳಿದರು.
ಇನ್ನು ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ಯೋಜನೆಯ ಮುಂದಿನ ಕಂತನ್ನು ಡಿಸೆಂಬರ್ 25ರಂದು ಪ್ರಧಾನಿ ಮೋದಿ ಬಿಡುಗಡೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ತಿಳಿಸಿದೆ.
ಪ್ರಧಾನಿ ಮೋದಿ ಅವರು ವಿಡಿಯೋ ಕಾನ್ಫೆರನ್ಸ್ ಮೂಲಕ ಒಂದು ಬಟನ್ ಒತ್ತುವ ಮೂಲಕ ಒಂಬತ್ತು ಕೋಟಿಗೂ ಹೆಚ್ಚು ಫಲಾನುಭವಿ ರೈತ ಕುಟುಂಬಗಳಿಗೆ 18,000 ಕೋಟಿ ರೂ. ವರ್ಗಾವಣೆ ಮಾಡಲಿದ್ದಾರೆ ಎಂದು ಪ್ರಧಾನಿ ಕಚೇರಿ ಹೇಳಿದೆ. ಅಲ್ಲದೆ ಈ ಸಂದರ್ಭದಲ್ಲಿ ಮೋದಿ ಅವರು ಆರು ರಾಜ್ಯಗಳ ರೈತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಪ್ರಧಾನಿ ಕಚೇರಿ(ಪಿಎಂಒ) ತಿಳಿಸಿದೆ.