ಹಾಸನದಲ್ಲಿ ಶೀಘ್ರದಲ್ಲೇ ವಿಮಾನ ನಿಲ್ದಾಣ! ಕಡತ ಮಂಡಿಸುವಂತೆ ಬಿಎಸ್‌ವೈ ಸೂಚನೆ
ಹೈಲೈಟ್ಸ್:
- ಹಾಸನದಲ್ಲಿ ಶೀಘ್ರದಲ್ಲೇ ನಿರ್ಮಾಣವಾಗಿದ್ಯಾ ವಿಮಾನ ನಿಲ್ದಾಣ
- ಈ ಕುರಿತಾಗಿ ಕಡತ ಮಂಡಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಸೂಚನೆ
- ವಿಮಾನ ನಿಲ್ದಾಣಕ್ಕೆ ಜೆಡಿಎಸ್ ಶಾಸಕರ ಜೊತೆಗೆ ಬಿಜೆಪಿ ಶಾಸಕ ಪ್ರೀತಂ ಗೌಡ ಬೇಡಿಕೆ
ಹಾಸನ:ಹಾಸನ ಜಿಲ್ಲೆಯಲ್ಲಿ ಶೀಘ್ರದಲ್ಲೇ ವಿಮಾನ ನಿಲ್ದಾಣ ಆರಂಭವಾಗುವ ಸಾಧ್ಯತೆ ಹೆಚ್ಚಾಗಿದೆ. ಈ ಕುರಿತಾಗಿ ಕಡತ ಮಂಡಿಸುವಂತೆ ಸಿಎಂ ಬಿಎಸ್ ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.ಹಾಸನದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಜೆಡಿಎಸ್ ಬೇಡಿಕೆ ಇಟ್ಟಿತ್ತು. ಈ ನಡುವೆ ಬಿಜೆಪಿ ಶಾಸಕ ಪ್ರೀತಂ ಗೌಡ ಅವರು ಕೂಡಾ ಸಿಎಂ ಬಿಎಸ್‌ವೈ ಪತ್ರ ಬರೆಯುವ ಮೂಲಕ ವಿಮಾನ ನಿಲ್ದಾಣಕ್ಕೆ ಆಗ್ರಹ ಮಾಡಿದ್ದರು.
ಹಾಸನದ ಬೂವನಹಳ್ಳಿಯಲ್ಲಿ ವಿಮಾನ ನಿಲ್ದಾಣ ಪ್ರಾರಂಭಿಸಲು ಅನುಮತಿ ನೀಡಬೇಕು ಹಾಗೂ ತಕ್ಷಣದಿಂದ ಕಾಮಗಾರಿ ಪ್ರಾರಂಭ ಮಾಡಬೇಕು ಎಂದು ಮನವಿ ಮಾಡಿದ್ದರು. ಹಾಸನ ನಗರವು ಮೈಸೂರು, ಶಿವಮೊಗ್ಗ, ಬೆಂಗಳೂರು ಹಾಗೂ ಮಂಗಳೂರಿಗೆ ಸಂಪರ್ಕ ಕಲ್ಪಿಸುವ ಹತ್ತಿರದ ಜಿಲ್ಲೆಯಾಗಿದೆ. ಇಲ್ಲಿ ವಿಮಾನ ನಿಲ್ದಾಣ
ನಿರ್ಮಾಣ ಮಾಡುವುದರಿಂದ ಜನರಿಗೆ ಅನುಕೂಲವಾಗಲಿದೆ.

ಭೂಸ್ವಾಧೀನ ಪ್ರಕ್ರಿಯೆ ಪೂರ್ಣಗೊಂಡರೂ ಕಾಮಗಾರಿ ಆರಂಭಗೊಂಡಿಲ್ಲ.ಈ ನಿಟ್ಟಿನಲ್ಲಿ ಕಾಮಗಾರಿ ಕೈಗೆತ್ತಿಕೊಂಡು ವಿಮಾನ ನಿಲ್ದಾಣ ನಿರ್ಮಾಣ ಮಾಡಬೇಕು ಎಂದು ಪ್ರೀತಂ ಗೌಡ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಸಿಎಂ ಬಿಎಸ್‌ವೈ ಕಡತ ಮಂಡನೆ ಮಾಡುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ಇದೇ ವಿಚಾರವಾಗಿ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರೂ ಮನವಿ ಸಲ್ಲಿಸಿದ್ದು, ಮುಖ್ಯಮಂತ್ರಿಗಳು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ಒತ್ತಾಯದ ಹಿನ್ನಲೆಯಲ್ಲಿ ಹಾಸನದ ವಿಮಾನ ನಿಲ್ದಾಣ ನಿರ್ಮಾಣ ಕಾಮಗಾರಿಗೆ ಅನುಮೋದನೆ ನೀಡಲಾಗಿದೆ ಎಂದು ಹೇಳಿದ್ದರು. ಆದರೆ ಹಾಸನದ ಶಾಸಕ ಪ್ರೀತಂ ಗೌಡರ ಪತ್ರಕ್ಕೆ ಮುಖ್ಯಮಂತ್ರಿ ಯಡಿಯೂರಪ್ಪ ಅನುಮೋದನೆ ನೀಡಿದ್ದಾರೆ.