Karnataka Weather Today: ಮುಂಗಾರು ಮಳೆಯ ಆರ್ಭಟ; ಕರಾವಳಿಯಲ್ಲಿ ಇಂದು ರೆಡ್ ಅಲರ್ಟ್ ಘೋಷಣೆ
Karnataka Monsoon Rain: ಬೆಂಗಳೂರು(ಜೂ. 14): ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದ್ದು, ಇಂದಿನಿಂದ ಮಲೆನಾಡು, ಕರಾವಳಿಯಲ್ಲಿ ಮಳೆಯ ಆರ್ಭಟ ತೀವ್ರಗೊಳ್ಳಲಿದೆ. ಇಂದಿನಿಂದ 4 ದಿನಗಳ ಕಾಲ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಉತ್ತರ ಒಳನಾಡಿನ ಜಿಲ್ಲೆಗಳಾದ ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆಯಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಇಂದಿನಿಂದ 4 ದಿನಗಳ ಕಾಲ ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ಭಾರೀ ಮಳೆಯಾಗುವ ನಿರೀಕ್ಷೆ ಇರುವುದರಿಂದ ಕರಾವಳಿ ಜಿಲ್ಲೆಗಳಲ್ಲಿ ಇಂದು ಒಂದು ದಿನಕ್ಕೆ ರೆಡ್ ಅಲರ್ಟ್ ಕೂಡ ನೀಡಲಾಗಿದೆ. ದಕ್ಷಿಣ ಕನ್ನಡ, ಉಡುಪಿಯಲ್ಲಿ ಮಳೆಯಿಂದ ಅನೇಕ ಮನೆ, ರಸ್ತೆಗಳು ಹಾನಿಯಾಗಿದ್ದು, ಹಲವೆಡೆ ವಿದ್ಯುತ್ ಸಂಪರ್ಕವೂ ಕಡಿತಗೊಂಡಿದೆ. ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರಾ ನದಿ ತುಂಬಿ ಹರಿಯುತ್ತಿದೆ. ಕಾರ್ಕಳ, ಕೊಟ್ಟಿಗೆಹಾರ, ಬಾಳೆಹೊನ್ನೂರು ಮುಂತಾದ ಕಡೆ ನಿನ್ನೆಯಿಂದ ಮಳೆ ಹೆಚ್ಚಾಗಿದೆ.
ಇಂದಿನಿಂದ ಜೂನ್ 17ರವರೆಗೆ ಕರ್ನಾಟಕದ ಕರಾವಳಿ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನಲ್ಲಿ ಭಾರೀ ಮಳೆಯಾಗುವ ನಿರೀಕ್ಷೆಯಿದ್ದು, ಆರೆಂಜ್ ಅಲರ್ಟ್ ಘೋಷಿಸಲಾಗಿದೆ. ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಹಾಸನ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಜೂನ್ 16 ಹಾಗೂ 17ರಂದು ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಉಳಿದ ದಿನಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಶಿವಮೊಗ್ಗದ ಹೊಸನಗರ, ಸಾಗರ, ತೀರ್ಥಹಳ್ಳಿ, ಚಿಕ್ಕಮಗಳೂರಿನ ಮೂಡಿಗೆರೆ, ಕೊಪ್ಪ, ಕಳಸ, ಶೃಂಗೇರಿ ಭಾಗದಲ್ಲಿ ಮಳೆಯ ಆರ್ಭಟ ಹೆಚ್ಚಾಗಿದೆ.
ಉತ್ತರ ಒಳನಾಡಿನಲ್ಲಿ ಇಂದಿನಿಂದ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ. ಹೀಗಾಗಿ, ಉತ್ತರ ಒಳನಾಡಿನಲ್ಲಿ ಇಂದಿನಿಂದ 2 ದಿನ ಹಳದಿ ಅಲರ್ಟ್ ಘೋಷಿಸಲಾಗಿದೆ. ಯಾದಗಿರಿ, ವಿಜಯಪುರ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಬಾಗಲಕೋಟೆ ಜಿಲ್ಲೆಗಳಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಕರ್ನಾಟಕದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದೆ. ಕರ್ನಾಟಕದ ಉಡುಪಿ, ಒಡಿಶಾ, ಕೇರಳದ ಕೊಜಿಕೊಡೆ, ವಯನಾಡಿನಲ್ಲಿ ಇಂದು ಮತ್ತು ನಾಳೆ ಅಧಿಕ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಹೇಳಿದೆ. ಕರಾವಳಿ ರಾಜ್ಯಗಳಾದ ಮಹಾರಾಷ್ಟ್ರ, ಗೋವಾ, ಕರ್ನಾಟಕ ಮತ್ತು ಕೇರಳದಲ್ಲಿ ಇನ್ನೂ 2 ದಿನ ಅಧಿಕ ಮಳೆಯಾಗಲಿದೆ.
ಕೇರಳ ರಾಜ್ಯದಲ್ಲೂ ಇಂದಿನಿಂದ 2 ದಿನ ಅಧಿಕ ಮಳೆಯಾಗಲಿದೆ. ಹೀಗಾಗಿ ಕೇರಳದ ಜಿಲ್ಲೆಗಳಾದ ಮಲಪ್ಪುರಂ, ಕೊಜಿಕೊಡೆ, ವಯನಾಡು, ಕಣ್ಣೂರು ಮತ್ತು ಕಾಸರಗೋಡಿನಲ್ಲಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಈ ವರ್ಷ ಜೂನ್ 3ಕ್ಕೆ ಕೇರಳವನ್ನು ಪ್ರವೇಶಿಸಿದ್ದ ನೈರುತ್ಯ ಮಾನ್ಸೂನ್ ಜೂನ್ 6ರಂದು ಕರ್ನಾಟಕವನ್ನು ಪ್ರವೇಶಿಸಿತ್ತು.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತವಾಗಿರುವುದರಿಂದ ಮಳೆಯ ಅಬ್ಬರ ಹೆಚ್ಚಾಗಿದೆ. ಕರಾವಳಿ ಮಾತ್ರವಲ್ಲದೆ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ಬೀದರ್, ಗದಗ , ಬೆಂಗಳೂರು ನಗರ, ಕಲಬುರ್ಗಿ, ಬೆಂಗಳೂರು ಗ್ರಾಮಾಂತರ, ಚಿತ್ರದುರ್ಗ, ಕೋಲಾರ, ತುಮಕೂರು, ಕೊಪ್ಪಳ, ದಾವಣಗೆರೆ ಜಿಲ್ಲೆಗಳಲ್ಲಿಯೂ ಇಂದಿನಿಂದ 1 ವಾರ ಹಳದಿ ಅಲರ್ಟ್ ಘೋಷಿಸಲಾಗಿದೆ