Karnataka Weather Today: ಇಂದಿನಿಂದ 3 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಕರಾವಳಿಯಲ್ಲಿ ಯೆಲ್ಲೋ ಅಲರ್ಟ್ ಘೋಷಣೆ
Karnataka Monsoon 2021: ಬೆಂಗಳೂರು (ಜೂನ್ 29): 2 ದಿನಗಳಿಂದ ಕರ್ನಾಟಕದಲ್ಲಿ ಮತ್ತೆ ಮಳೆ ಶುರುವಾಗಿದ್ದು, ರೈತರು ಕೃಷಿ ಚಟುವಟಿಕೆಗಳನ್ನು ಚುರುಕುಗೊಳಿಸಿದ್ದಾರೆ. ನೆರೆಯ ರಾಜ್ಯಗಳಲ್ಲೂ ಮಳೆಯಾಗುತ್ತಿದ್ದು, ಹಲವು ಪ್ರದೇಶಗಳಲ್ಲಿ ಪ್ರವಾಹ ಪರಿಸ್ಥಿತಿ ಎದುರಾಗಿದೆ. ಇಂದಿನಿಂದ ಜುಲೈ 1ರವರೆಗೆ ಕರಾವಳಿ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯ ಮುನ್ಸೂಚನೆ ನೀಡಲಾಗಿದೆ. ಹೀಗಾಗಿ, ಇನ್ನು 3 ದಿನಗಳ ಕಾಲ ಕರಾವಳಿಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ.
ಕರಾವಳಿ ಜಿಲ್ಲೆಗಳಲ್ಲಿ 2 ದಿನಗಳಿಂದ ಮಳೆಯಾಗುತ್ತಿದ್ದು, ಇಂದು ಕೂಡ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಜೊತೆಗೆ, ಉತ್ತರ ಒಳನಾಡು, ಕಲ್ಯಾಣ ಕರ್ನಾಟಕದಲ್ಲಿ ಇಂದು ಮಳೆಯ ತೀವ್ರತೆ ಹೆಚ್ಚಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ದಕ್ಷಿಣ ಒಳನಾಡಿನ ಬಹುತೇಕ ಎಲ್ಲ ಜಿಲ್ಲೆಗಳಲ್ಲಿ ಕೂಡ ಜುಲೈ 1ರವರೆಗೆ ಭಾರೀ ಮಳೆಯಾಗಲಿದೆ.
ಜುಲೈ 1ರವರೆಗೂ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಹಳದಿ ಅಲರ್ಟ್ ಘೋಷಿಸಲಾಗಿದೆ. 2 ದಿನಗಳಿಂದ ಕಲ್ಯಾಣ ಕರ್ನಾಟಕದಲ್ಲಿ ಮಳೆ ಹೆಚ್ಚಾಗಿದ್ದು, ಮನೆಯೊಳಗೆ ನೀರು ನುಗ್ಗಿ ಪ್ರವಾಹದ ಸ್ಥಿತಿ ಏರ್ಪಟ್ಟಿದೆ. ಕರ್ನಾಟಕದ ದಕ್ಷಿಣ ಒಳನಾಡು ಮತ್ತು ಉತ್ತರ ಒಳನಾಡಿನಲ್ಲಿಯೂ ಮಳೆಯ ಆರ್ಭಟ ಹೆಚ್ಚಾಗಲಿದ್ದು, ಇಂದಿನಿಂದ 3 ದಿನ ಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಪ್ರಾದೇಶಿಕ ವಲಯದ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಕಲ್ಯಾಣ ಕರ್ನಾಟಕದ ಕಲಬುರ್ಗಿ, ರಾಯಚೂರು, ಯಾದಗಿರಿ, ಬೀದರ್, ಕೊಪ್ಪಳ ಜಿಲ್ಲೆಗಳಲ್ಲಿ ಎರಡ್ಮೂರು ದಿನಗಳಿಂದ ಉತ್ತಮ ಮಳೆಯಾಗಿದೆ. ಇದರಿಂದ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಜನರು ತೊಂದರೆಗೀಡಾಗಿದ್ದಾರೆ. ರಾಯಚೂರಿನ ಮಸ್ಕಿಯ 4 ವಾರ್ಡ್ ಸಂಪೂರ್ಣ ಜಲಾವೃತವಾಗಿವೆ. ಮಲೆನಾಡಿನಲ್ಲೂ ಇನ್ನು 3 ದಿನ ಮಳೆಯಾಗಲಿದ್ದು, ಶಿವಮೊಗ್ಗ, ಹಾಸನ, ಕೊಡಗು, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಜುಲೈ 1ರವರೆಗೆ ಗುಡುಗು ಸಹಿತ ಮಳೆಯಾಗಲಿದೆ. ಬೆಂಗಳೂರಿನಲ್ಲಿ ಕೂಡ ಇಂದು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಈಗಾಗಲೇ ನೆರೆಯ ರಾಜ್ಯಗಳಲ್ಲಿ ಸಾಧಾರಣ ಮಳೆಯಾಗುತ್ತಿದ್ದು, ಕರ್ನಾಟಕದಲ್ಲೂ ಮತ್ತೊಂದು ಹಂತದ ಮಳೆ ಮತ್ತೆ ಶುರುವಾಗಲಿದೆ.
ಉತ್ತರ ಒಳನಾಡು ಹಾಗೂ ದಕ್ಷಿಣ ಒಳನಾಡಿನಲ್ಲಿ ಇಂದಿನಿಂದ ಮತ್ತೆ ಮಳೆಯಾಗಲಿದೆ. ಆದರೆ, ಕರಾವಳಿಯಲ್ಲಿ ಇಂದಿನಿಂದ 3 ದಿನ ಮಳೆಯ ಅಬ್ಬರ ಹೆಚ್ಚಾಗಲಿದೆ. ಇಂದಿನಿಂದ ಜುಲೈ 1ರವರೆಗೆ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಕರ್ನಾಟಕ ಮಾತ್ರವಲ್ಲದೆ, ಒಡಿಶಾ, ಭುವನೇಶ್ವರದಲ್ಲಿ 2 ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಭುವನೇಶ್ವರದ ಅನೇಕ ಕಡೆ ರಸ್ತೆಗಳು ಬಂದ್ ಆಗಿದ್ದು, ನದಿ ತೀರದ ಗ್ರಾಮಗಳಿಗೂ ನೀರು ನುಗ್ಗಿದೆ. ಇಷ್ಟೇ ಅಲ್ಲದೆ, ರಾಜಸ್ಥಾನ, ಉತ್ತರ ಪ್ರದೇಶ, ಹರಿಯಾಣ, ಚಂಡೀಗಢ, ದೆಹಲಿ, ಪಂಜಾಬ್ ರಾಜ್ಯಗಳಲ್ಲೂ ಸಾಧಾರಣ ಮಳೆಯಾಗಲಿದೆ.
ಕರಾವಳಿ ಜಿಲ್ಲೆಯಲ್ಲಿ ಇಂದಿನಿಂದ ಜುಲೈ 1ರವರೆಗೆ ವ್ಯಾಪಕ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನಲ್ಲಿ ಇಂದು ಬಹುತೇಕ ಎಲ್ಲಾ ಸ್ಥಳಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ. ಇಂದಿನಿಂದ ಜುಲೈ 1 ರವರೆಗೆ ಕೆಲವು ಕಡೆ ಮಾತ್ರ ಮಳೆಯಾಗುವ ಸಾಧ್ಯತೆಯಿದೆ . ಹೈದರಾಬಾದ್ ಕರ್ನಾಟಕ ಜಿಲ್ಲೆಗಳಲ್ಲಿ ಹಲವೆಡೆ ಮಳೆಯಾಗಲಿದೆ. ಬೀದರ್, ಕಲಬುರ್ಗಿ, ಯಾದಗಿರಿ ಹಾಗೂ ರಾಯಚೂರು ಜಿಲ್ಲೆಯ ಕೆಲವೆಡೆ ಭಾರೀ ಮಳೆಯಾಗುವ ಸಾಧ್ಯತೆ. ದಕ್ಷಿಣ ಒಳನಾಡಿನಲ್ಲಿ ಜುಲೈ 1ರವರೆಗೆ ಬಹುತೇಕ ಎಲ್ಲ ಸ್ಥಳಗಳಲ್ಲಿ ಮಳೆಯಾಗುವ ಸಾಧ್ಯತೆಯಿದೆ ಎಂದು ರಾಜ್ಯ ಹವಾಮಾನ ಇಲಾಖೆ ನಿರ್ದೇಶಕ ಸಿ.ಎಸ್. ಪಾಟೀಲ್ ಮಾಹಿತಿ ನೀಡಿದ್ದಾರೆ.
ಮುಂದಿನ 5 ದಿನಗಳ ಕಾಲ ಪಶ್ಚಿಮ ಬಂಗಾಳ, ಸಿಕ್ಕಿಂ, ಅಸ್ಸಾಂ, ಮೇಘಾಲಯದಲ್ಲಿ ವಿಪರೀತ ಮಳೆಯಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.