ಕಲಬುರಗಿ : ಬಿಜೆಪಿ ಕಚೇರಿ ನೂತನ ಕಟ್ಟಡ ಒಂದು ವರ್ಷದೊಳಗೆ ಪೂರ್ಣವಾಗಲಿ: ಮುಖ್ಯಮಂತ್ರಿ
ಕಲಬುರಗಿ : ಜಿಲ್ಲಾ ಬಿಜೆಪಿ ಕಚೇರಿಯ ಸುಸಜ್ಜಿತ ಕಟ್ಟಡ ನಿರ್ಮಾಣ ಕಾಮಗಾರಿಯನ್ನು ಒಂದು ವರ್ಷದೊಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಹೇಳಿದರು.
ಶನಿವಾರ ಜಿಲ್ಲಾ ಬಿಜೆಪಿ ಕಚೇರಿಗೆ ಭೇಟಿ ನೀಡಿ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಅವರು, ಈಗಾಗಲೇ ಬಿಜೆಪಿ ಕಚೇರಿಯ ನೂತನ ಕಟ್ಟಡ ಕಾಮಗಾರಿ ಆರಂಭಗೊಂಡಿದೆ. ಅದಕ್ಕೆ ಬೇಕಾಗುವ ಅನುದಾನವನ್ನೂ ಸಹ ಒದಗಿಸಲು ಸಿದ್ಧನಿದ್ದೇನೆ. ಒಂದು ವರ್ಷದೊಳಗೆ ಕಚೇರಿ ಕಾರ್ಯಾರಂಭಗೊಳ್ಳಬೇಕು ಎಂದರು.
ಸಚಿವರು ಹಾಗೂ ಮುಖ್ಯಮಂತ್ರಿಗಳು ಪಾಲ್ಗೊಳ್ಳುವ ಸರ್ಕಾರಿ ಕಾರ್ಯಕ್ರಮಗಳಿಗಿಂತ ಮುಂಚೆಯೇ ಪಕ್ಷದ ಕಚೇರಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಬೇಕೆನ್ನುವುದು ಪಕ್ಷದ ನಡಾವಳಿಯಾಗಿದೆ. ಹಾಗಾಗಿ ನಾನು ಬಿಜೆಪಿ ಕಚೇರಿಗೆ ಭೇಟಿ ನೀಡಿದ್ದೇನೆ. ಪಕ್ಷವನ್ನು ರಾಜ್ಯದಲ್ಲಿ ಇನ್ನಷ್ಟು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.
ಪಕ್ಷದ ಎಲ್ಲ ಮೋರ್ಚಾಗಳನ್ನೂ ಸಹ ಬಲಪಡಿಸಬೇಕು. ಒಟ್ಟು 30 ಮೋರ್ಚಾಗಳಿದ್ದು, ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ, ಹಿಂದುಳಿದವರು ಹಾಗೂ ಅಲ್ಪಸಂಖ್ಯಾತರು, ಯುವ ಘಟಕ, ಮಹಿಳಾ ಘಟಕ ಮುಂತಾದ ಎಲ್ಲ ಘಟಕಗಳಿಗೆ ಹೊಸ ಸದಸ್ಯರನ್ನು ನೊಂದಣಿ ಮಾಡುವ ಮೂಲಕ ಪಕ್ಷವನ್ನು ತಳಮಟ್ಟದಲ್ಲಿ ಮತ್ತಷ್ಟು ಬಲಪಡಿಸಬೇಕು ಎಂದು ಅವರು ಹೇಳಿದರು.
ನಮಗೆ ಕೇಂದ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಉತ್ತಮ ನಾಯಕತ್ವ ದೊರಕಿದೆ. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಎಲ್ಲ ಯೋಜನೆಗಳನ್ನು ಹಾಗೂ ಕಾರ್ಯಕ್ರಮಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಬೇಕು ಎಂದು ಅವರು ಕರೆ ನೀಡಿದರು.
ಸಭೆಯಲ್ಲಿ ರಾಜ್ಯದ ಉಪ ಮುಖ್ಯಮಂತ್ರಿ ಗೋವಿಂದ್ ಕಾರಜೋಳ್, ಗಣಿ ಮತ್ತು ಭೂ ವಿಜ್ಞಾನ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ನಿರಾಣಿ, ಸಹಕಾರ ಸಚಿವ ಎಸ್.ಟಿ. ಸೋಮಶೇರ್, ನಗರಾಭಿವೃದ್ಧಿ ಸಚಿವ ಭೈರತಿ ಬಸವರಾಜ್, ಸಂಸದ ಡಾ. ಉಮೇಶ್ ಜಾಧವ್, ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅಧ್ಯಕ್ಷ, ಸೇಡಂ ಶಾಸಕ ಹಾಗೂ ಕಲಬುರ್ಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ್, ಕಲ್ಯಾಣ ಕರ್ನಾಟಕ ಪ್ರದೇಶ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಹಾಗೂ ದಕ್ಷಿಣ ಶಾಸಕ ದತ್ತಾತ್ತ್ರೇಯ್ ಪಾಟೀಲ್ ರೇವೂರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಹಾಗೂ ಮಾಜಿ ಸಚಿವ ಮಾಲಿಕಯ್ಯ ಗುತ್ತೇದಾರ್, ಶಾಸಕರುಗಳಾದ ಸುಭಾಷ್ ಆರ್. ಗುತ್ತೇದಾರ್, ಬಸವರಾಜ್ ಮತ್ತಿಮೂಡ್, ಡಾ. ಅವಿನಾಶ್ ಜಾಧವ್, ವಿಧಾನ ಪರಿಷತ್ ಸದಸ್ಯರಾದ ಸುನೀಲ್ ವಲ್ಲ್ಯಾಪುರೆ, ಶಶೀಲ್ ಜಿ. ನಮೋಶಿ, ಬಿ.ಜಿ. ಪಾಟೀಲ್, ಡಾ. ತಳವಾರ ಸಾಯಿಬಣ್ಣಾ, ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ವಿ. ಟೆಂಗಳಿ, ಕರ್ನಾಟಕ ನವೀಕರಿಸಬಹುದಾದ ಇಂಧನ ಅಭಿವೃದ್ಧಿ ನಿಯಮಿತದ ಅಧ್ಯಕ್ಷ ಚಂದು ಪಾಟೀಲ್, ಭೀಮರಾಯನಗುಡಿ ಅಚ್ಟುಕಟ್ಟು ಪ್ರದೇಶಾಭಿವೃದ್ಧಿ ಪ್ರಾಧಿಕಾರ ಕೃಷ್ಣ ಮೇಲ್ದಂಡೆ ಯೋಜನೆ (ಕಾಡಾ) ಅಧ್ಯಕ್ಷ ಶರಣಪ್ಪ ತಳವಾರ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ದಯಾಘನ್ ಧಾರವಾಡಕರ್, ಕಲಬುರ್ಗಿ ಅಚ್ಚುಕಟ್ಟು ಪ್ರಾದೇಶಾಭಿವೃದ್ಧಿ ಪ್ರಾಧಿಕಾರ ನೀರಾವರಿ ಯೋಜನೆಗಳ ವಲಯದ ಅಧ್ಯಕ್ಷ ಹರ್ಷವರ್ಧನ್ ಗುಂಡಪ್ಪ ಗುಳಗೆ, ತೊಗರಿ ಅಭಿವೃದ್ಧಿ ಮಂಡಳಿ ಅಧ್ಯಕ್ಷ ಲಿಂಗಾರೆಡ್ಡಿ ಬಾಸರೆಡ್ಡಿ, ಕೃಷಿ ಉತ್ಪನ್ನ ಮಾರುಕಟ್ಟೆ ಸಮಿತಿಯ ಅಧ್ಯಕ್ಷ ಗುರುಬಸಪ್ಪ ಕಣಕಿ, ಜಿಲ್ಲಾ ಸಹಕಾರ ಬ್ಯಾಂಕಿನ ಉಪಾಧ್ಯಕ್ಷ ಸುರೇಶ್ ಆರ್. ಸಜ್ಜನ್, ಮಾಜಿ ಶಾಸಕ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್, ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ್ ಪಾಟೀಲ್ ರದ್ದೆವಾಡಗಿ, ನಗರ ಜಿಲ್ಲಾಧ್ಯಕ್ಷ ಸಿದ್ದಾಜಿ ಪಾಟೀಲ್, ಲಿಂಗರಾಜ್ ಬಿರಾದಾರ್ ಮುಂತಾದವರು ಉಪಸ್ಥಿತರಿದ್ದರು.